ಕಲಬುರಗಿ:
ಮಾಜಿ ಸಚಿವ, 371ಜೆ ವಿಧಿ ತಿದ್ದುಪಡಿ ಜಾರಿ ಹೋರಾಟಗಾರ ವೈಜನಾಥ ಪಾಟೀಲ್ ರವರು ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.
ಅನಾರೋಗ್ಯ ದಿಂದ ಬಳಲುತ್ತಿದ್ದ ಪಾಟೀಲ್ ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರನ್ನು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ಒಂದು ವಾರದ ಹಿಂದೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.
ಮೃತರ ಪರಿಚಯ :
ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ 1994 ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ರಾಮಕೃಷ್ಣ ಹೆಗಡೆ ಸಂಪುಟದಲ್ಲಿ 1984ರಲ್ಲಿ ತೋಟಗಾರಿಕೆ ಹಾಗೂ ಎಚ್. ಡಿ. ದೇವೆಗೌಡ ಸಂಪುಟದಲ್ಲಿ 1994ರಲ್ಲಿ ನಗರಾಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಮೂಲತಃ ಬೀದರ್ ಜಿಲ್ಲೆಯವರಾಗಿದ್ದ ವೈಜನಾಥ ಪಾಟೀಲ, ಕಲಬುರ್ಗಿಯನ್ನು ತಮ್ಮ ರಾಜಕೀಯ ಕರ್ಮಭೂಮಿಯನ್ನಾಗಿಸಿಕೊಂಡಿದ್ದರು.
ಹೈದರಾಬಾದ್ ಕರ್ನಾಟಕ ಈಗಿನ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪಾಟೀಲ್ ರ ಮನಸ್ಸು ಸದಾ ಮಿಡಿಯುತ್ತಿತ್ತು. ಈ ಭಾಗದ ಅಭಿವೃದ್ಧಿಗಾಗಿ ವಿಶೇಷ ಸ್ಥಾನಮಾನ ಕಲ್ಪಿಸುವ 371 ಜೆ ವಿಧಿ ಜಾರಿಗೆ ಆಗ್ರಹಿಸಿ ಎರಡು ದಶಕಗಳ ಹಿಂದೆ ಧ್ವನಿ ಎತ್ತಿ ಹೋರಾಟ ರೂಪಿಸಿದವರೇ ವೈಜನಾಥ ಪಾಟೀಲ್.
371 ಜೆ ವಿಧಿ ಜಾರಿಯಲ್ಲದೇ ಕಲ್ಯಾಣ ಕರ್ನಾಟಕ ಭಾಗಕ್ಕೆ ಏನಾದರೂ ಅನ್ಯಾಯವಾದರೆ ತಕ್ಷಣವೇ ಸರಕಾರ ದ ಗಮನ ಸೆಳೆಯುತ್ತಿದ್ದ ವೈಜನಾಥ ಪಾಟೀಲ್ ಅವರು ತಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದವರಾಗಿದ್ದಾರೆ.
ನಾಳೆ ಅಂತ್ಯಕ್ರಿಯೆ :
ಮೃತರ ಅಂತ್ಯಕ್ರಿಯೆ ನಾಳೆ(ಭಾನುವಾರ) ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.