ಬೆಂಗಳೂರು:
ಬಂಡಾಯ ಬಾವುಟ ಹಾರಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ತಮ್ಮ ನಿರ್ಧಾರ ಬದಲಿಸಿದ್ದಾರೆ.
ದೋಸ್ತಿ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದ ರಾಮಲಿಂಗಾರೆಡ್ಡಿ ವಾರದ ಹಿಂದೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಇರುವುದಾಗಿ ಹೇಳಿದ್ದ ಅವರು, ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಕುತೂಹಲ ಕಾಯ್ದುಕೊಂಡಿದ್ದರು. ಇದೀಗ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಮತ್ತು ಕಾರ್ಯಕರ್ತರ ಒತ್ತಡಕ್ಕೆ ಮಣಿದು ರಾಜೀನಾಮೆ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ರಾಜೀನಾಮೆ ಹಿಂಪಡೆಯುವುದರ ಜೊತೆಗೆ ಇಂದು ನಡೆಯಲಿರುವ ವಿಶ್ವಾಸ ಮತಯಾಚನೆಯಲ್ಲಿ ಸರ್ಕಾರದ ಪರವಾಗಿ ಮತ ಚಲಾಯಿಸುತ್ತೇನೆಂದು ಎಂದು ಸ್ಪಷ್ಟನೆ ನೀಡಿದ್ದಾರೆ.
ಸತತ 7 ಬಾರಿ ಶಾಸಕರಾಗಿರುವ ಅವರು ನಾಲ್ಕೂವರೆ ದಶಕಗಳಿಂದ ಪಕ್ಷಕ್ಕಾಗಿ ದುಡಿದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಅವರನ್ನು ಕಡೆಗಣಿಸಿದ್ದರಿಂದ ರಾಜೀನಾಮೆ ನೀಡಿದ್ದರು.
ಪಕ್ಷದ ಹಿರಿಯ ನಾಯಕರು ಮತ್ತು ಕಾರ್ಯಕರ್ತರ ಒತ್ತಡ ಹಿನ್ನೆಲೆಯಲ್ಲಿ ರಾಜೀನಾಮೆ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ಸ್ಪೀಕರ್ ಗೆ ಕರೆ ಮಾಡಿ ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ