ನವದೆಹಲಿ:
ಸುಪ್ರೀಂಕೋ ರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯಿ ಅವರು ಗುರುವಾರ ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಂಸತ್ತಿನ ಮೇಲ್ಮನೆಯಲ್ಲಿ ಇಂದು ಗೊಗೊಯಿ ಅವರಿಗೆ ಸಭಾಪತಿ ಡಾ.ಎಂ.ವೆಂಕಯ್ಯನಾಯ್ಡು ಪ್ರಮಾಣ ವಚನ ಬೋಧಿಸಿದರು. ಮೂಲತಃ ಅಸ್ಸಾಂ ರಾಜ್ಯದವರಾದ ರಂಜನ್ ಗೋಗಾಯ್ 2018ರ ಅಕ್ಟೋಬರ್‌ನಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. 2019ರ ನವೆಂಬರ್ 17ರಂದು ಅವರು ನಿವೃತ್ತರಾಗಿದ್ದಾರೆ.
ನಿವೃತ್ತ ಸಿಐಜೆ ರಂಜನ್ ಗೋಗಾಯ್‌ರನ್ನು ನಾಮ ನಿರ್ದೇಶನ ಮಾಡಿರುವ ಬಗ್ಗೆ ದೇಶದಲ್ಲಿ ಚರ್ಚೆಗಳು ನಡೆಯುತ್ತಿವೆ. ಅಯೋಧ್ಯೆ, ರಫೆಲ್ ಸೇರಿದಂತೆ ಪ್ರಮುಖ ಪ್ರಕರಣಗಳ ಬಗ್ಗೆ ತೀರ್ಪು ನೀಡಿದ್ದ ರಂಜನ್ ಗೋಗಾಯ್‌ರನ್ನು ರಾಜ್ಯಸಭೆಗೆ ಆಯ್ಕೆ ಮಾಡಿರುವ ಬಗ್ಗೆ ಪ್ರತಿಪಕ್ಷಗಳು ಸಹ ಪ್ರಶ್ನೆ ಎತ್ತಿದ್ದವು.
ಪ್ರಮಾಣವಚನದ ವೇಳೆ, ಮಾಜಿ ಮುಖ್ಯ ನ್ಯಾಯಮೂರ್ತಿಗಳು ಸೇರಿದಂತೆ ವಿವಿಧ ರಂಗದಲ್ಲಿ ಸೇವೆ ಸಲ್ಲಿಸಿದ ಗಣ್ಯರು ರಾಜ್ಯಸಭೆಗೆ ಆಯ್ಕೆಯಾಗಿದ್ದ ದೊಡ್ಡ ಸಂಪ್ರದಾಯ ನಮ್ಮದಾಗಿದೆ. ಈ ನಿಟ್ಟಿನಲ್ಲಿ ಜಸ್ಟೀಸ್ ಗೋಗೊಯಿ ಅವರು ಕೂಡಾ ಇಂದು ಪ್ರಮಾಣವಚನ ಸ್ವೀಕರಿಸುವ ಮೂಲಕ ಉತ್ತಮ ಕೊಡುಗೆ ನೀಡಲಿದ್ದಾರೆ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳುತ್ತಿದ್ದಂತೆಯೇ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಸಮಾಜವಾದಿ ಪಕ್ಷವನ್ನು ಹೊರತುಪಡಿಸಿ ಉಳಿದ ಎಲ್ಲಾ ವಿಪಕ್ಷಗಳು ಪ್ರಮಾಣವಚನ ಬಹಿಷ್ಕರಿಸಿ ಹೊರನಡೆದ ಘಟನೆ ನಡೆಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ