ಬೆಂಗಳೂರು:
ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದ್ದು, ಜೂನ್ 25ರಿಂದ ನಡೆಸಲು ನಿರ್ಧರಿಸಲಾಗಿದೆ.
ಕರ್ನಾಟಕದಲ್ಲಿ ಲಾಕ್ಡೌನ್ ಘೋಷಿಸಿದ್ದರಿಂದ ಪಿಯುಸಿ, ಎಸ್ಎಸ್ಎಲ್ಸಿ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಎಸ್ಎಸ್ಎಲ್ಸಿ ಪರೀಕ್ಷೆಯ ದಿನಾಂಕವನ್ನು ಘೋಷಿಸಿದ್ದಾರೆ.
ಕರ್ನಾಟಕದಲ್ಲಿ ಜೂನ್ 25ರಿಂದ ಜುಲೈ 4ರವರೆಗೆ 10ನೇ ತರಗತಿ ಪರೀಕ್ಷೆಗಳು ನಡೆಯಲಿವೆ. ಹಾಗೇ, ಜೂನ್ 18ಕ್ಕೆ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.
ಸದ್ಯದಲ್ಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ 1 ತಿಂಗಳು ಮುಂಚಿತವಾಗಿ ಪರೀಕ್ಷೆ ದಿನಾಂಕವನ್ನು ಘೋಷಿಸಲಾಗಿದೆ. ಇಂಗ್ಲಿಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನ ಅಂತರವನ್ನು ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಪರೀಕ್ಷೆಗೆ ಬದಲಾದ ಪರಿಸ್ಥಿತಿಯಲ್ಲಿ ಹೆಚ್ಚುವರಿ ಕೊಠಡಿ ಬಳಸುತ್ತೇವೆ. 2879 ಪರೀಕ್ಷಾ ಕೇಂದ್ರಗಳಲ್ಲಿ 43720 ಕೊಠಡಿ ಬಳಸುತ್ತಿದ್ದೇವೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ಸಲಹೆ ಪಡೆದು ಪ್ರತಿ ಸಭಾಂಗಣದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡುತ್ತೇವೆ. ಪರೀಕ್ಷೆ ನಡೆಯುವ ಶಾಲೆಗಳ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುವುದು ಮತ್ತು ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
