ಹಾವೇರಿ :
ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಬುದ್ಧಿವಾದ ಹೇಳಿದ್ದಕ್ಕೆ ಪೊಲೀಸರು ಸೇರಿದಂತೆ ಅಧಿಕಾರಿಗಳ ಮೇಲೆ ಜನರ ಗುಂಪು ಹಲ್ಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ತಗ್ಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿಯಪ್ಪ ರಾತ್ರಿ 8 ಗಂಟೆಗೆ ಪೊಲೀಸರು ಮತ್ತು ಗೃಹ ರಕ್ಷಕದಳ ಸಿಬ್ಬಂದಿಯೊಂದಿಗೆ ತೆಗ್ಗಿಹಳ್ಳಿ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ರಸ್ತೆ ಪಕ್ಕದಲ್ಲಿ ಗುಂಪು ಗುಂಪಾಗಿ ಜನ ಸೇರಿದ್ದನ್ನು ಕಂಡು ಜಿಲ್ಲಾದ್ಯಂತ 144 ಸೆಕ್ಷನ್ ಜಾರಿಯಲ್ಲಿದ್ದು, 5ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ, ಮನೆಯೊಳಗೆ ಹೋಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ತಿಳಿ ಹೇಳಿದ್ದಾರೆ.
ಇದರಿಂದ ಕೆರಳಿದ ಗುಂಪು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಐವರು ಪೊಲೀಸರು ಹಾಗೂ ಒಬ್ಬ ಗೃಹ ರಕ್ಷಕ ದಳದ ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿದೆ.
ತಕ್ಷಣ ಮಾಹಿತಿ ಪಡೆದ ಸವಣೂರು ಸವಣೂರು ಸಿಪಿಐ ಶಶಿಧರ ಅವರು ಮತ್ತಷ್ಟು ಪೊಲೀಸ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಯಾಕೆ ಗಲಾಟೆ ಮಾಡುತ್ತೀರಿ ಎಂದು ಕೇಳಿದ್ದಕ್ಕೆ ಇನ್ಸ್‌ಪೆಕ್ಟರ್ ಸೇರಿ ಎಲ್ಲ ಪೊಲೀಸರ ಮೇಲೂ ಗುಂಪು ಏಕಾಏಕಿಯಾಗಿ ಮುಗಿಬಿದ್ದು ಹಲ್ಲೆ ನಡೆಸಿದೆ. ತಲೆ, ಕೈ, ಮರ್ಮಾಂಗ ಸೇರಿದಂತೆ ಎಲ್ಲೆಂದರಲ್ಲಿ ಹಲ್ಲೆ ಮಾಡಿ ಗಾಯಗೊಳಿಸಲಾಗಿದೆ.
ಹಲ್ಲೆಗೊಳಗಾದ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಘಟನೆಗೆ ಸಂಬಂಧಿಸಿದಂತೆ ಒಂದೇ ಕೋಮಿನ 10 ಮಂದಿಯನ್ನು ಬಂಧಿಸಲಾಗಿದೆ. ಗ್ರಾಮಕ್ಕೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ