ಬೆಳಗಾವಿ :
ಡಿಸೆಂಬರ್ 7ರಿಂದ 15ರವರೆಗೆ ಚಳಿಗಾಲದ ಅಧಿವೇಶನ ನಡೆಸಲು ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಸಭೆಯ ಮುಖ್ಯಾಂಶಗಳ ಬಗ್ಗೆ ಮಾಹಿತಿ ನೀಡಿದ್ದು, ಇವತ್ತು ಸ್ವಲ್ಪ ಬೇಗ ಸಚಿವ ಸಂಪುಟ ಸಭೆ ಮುಗಿಸಿದ್ದೇವೆ. ಡಿಸೆಂಬರ್ 7ರಿಂದ 15ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ. ವಿಜಯನಗರ ಜಿಲ್ಲೆರಚಿಸಲು ತೀರ್ಮಾನ ಮಾಡಲಾಗಿದೆ. ಅನೌಪಚಾರಿಕವಾಗಿ ವಿಜಯನಗರ ಜಿಲ್ಲೆ ಬಗ್ಗೆ ಚರ್ಚೆ ಮಾಡಲಾಗಿದೆ ಎಂದರು.
ಹೋದ ವರ್ಷ ಹಿಂದೆಂದೂ ಕಂಡರಿಯದ ಪ್ರಮಾಣದಲ್ಲಿ ಜಿಲ್ಲೆಯಲ್ಲಿ ನೆರೆ ಹಾಗೂ ಅತಿವೃಷ್ಟಿ ಉಂಟಾಗಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಸಂಭವಿಸಿತ್ತು. ಸಾವಿರಾರು ಮಂದಿ ಸಂತ್ರಸ್ತರಾಗಿದ್ದರು. ಹೀಗಾಗಿ, ನೆರೆ ಪರಿಹಾರ ಕಾರ್ಯಗಳಲ್ಲಿ ಅಧಿಕಾರಿಗಳು ತೊಡಗಬೇಕು, ಅವರಿಗೆ ಸಮಯ ಬೇಕು. ಆದ್ದರಿಂದ ಅಧಿವೇಶನವನ್ನು ಬೆಳಗಾವಿ ಬದಲಿಗೆ ಬೆಂಗಳೂರಿನಲ್ಲಿ ನಡೆಸಲಾಗುವುದು ಎಂದು ಸರ್ಕಾರ ಹೇಳಿತ್ತು.
ಈ ಬಾರಿ ಕೋವಿಡ್-19 ನೆಪವೊಡ್ಡಿ ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸಲು ನಿರ್ಧರಿಸಲಾಗಿದೆ. ಸರ್ಕಾರದ ಈ ನಡೆಯ ವಿರುದ್ಧ ಇಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನೂರಾರು ಕೋಟಿ ವೆಚ್ಚದಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಿರುವ ಔಚಿತ್ಯವಾದರೂ ಏನು ಎಂದು ಪ್ರಶ್ನಿಸುತ್ತಿದ್ದಾರೆ. ರಾಜ್ಯ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸದಿರುವುದು ಹಾಗೂ ಈಗ ಅಧಿವೇಶನ ನಡೆಸುವುದನ್ನೂ ತಪ್ಪಿಸಿರುವುದು ಅವರ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ