ಬೆಂಗಳೂರು :

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಯೋಗೀಶ್ ಗೌಡರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ನಿರ್ಧಾರ ಕೈಗೊಳ್ಳಲಾಗಿದ್ದು, ನಂತರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಗೃಹ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರಕರಣವನ್ನು ಸಿಬಿಐಗೆ ವಹಿಸಲು ಅಂತಿಮ ನಿರ್ಧಾರ ಕೈಗೊಂಡಿದ್ದಾರೆ.![]()
2016 ರ ಜೂನ್ 15 ರಂದು ಯೋಗೀಶ್ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು. ಕೊಲೆ ನಡೆದ ಮೂರೇ ದಿನಕ್ಕೆ ಆರೋಪಿಗಳು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಯೋಗೀಶ್ ಗೌಡ ಅವರಿಂದ ಜೀವ ಬೆದರಿಕೆ ಇದ್ದು, ಈ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದರು. ಎರಡು ವರ್ಷ ಜೈಲಿನಲ್ಲಿದ್ದ ಆರೋಪಿಗಳು ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ಕೊಲೆ ಎಂದು ಬಿಜೆಪಿ ಈ ಬಗ್ಗೆ ಅನೇಕ ಬಾರಿ ಪ್ರತಿಭಟನೆ ನಡೆಸಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿತ್ತು.
ಈ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಹೆಸರು ಕೇಳಿಬಂದಿತ್ತು. ಪೊಲೀಸ್ ತನಿಖೆಯ ದಿಕ್ಕು ತಪ್ಪಿಸಲು ಪ್ರಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ, ಯೋಗೀಶ್ ಗೌಡ ಸಹೋದರ ಸಿಬಿಐ ತನಿಖೆಗೆ ವಹಿಸುವಂತೆ ಹೈಕೋರ್ಟಿಗೆ ಮನವಿ ಮಾಡಿದ್ದರು.
ಈ ಎಲ್ಲಾ ಕಾರಣಗಳಿಂದ ಸರ್ಕಾರ ಯೋಗೀಶ್ ಗೌಡರ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ಧರಿಸಿದೆ ಎಂದು ಹೇಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








