ಬೆಂಗಳೂರು:
ಕಾವೇರಿ ನದಿಪಾತ್ರದ ಮೇಕೆದಾಟು ಯೋಜನೆಗೆ ಅನುಮತಿ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರದ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ.
ನವದೆಹಲಿಯಲ್ಲಿಂದು ತಮ್ಮನ್ನು ಭೇಟಿ ಮಾಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಈ ಕುರಿತ ಮನವಿ ಸ್ವೀಕರಿಸಿದ ಬಳಿಕ, ಯೋಜನೆ ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರದೊಂದಿಗೆ ಮಾತುಕತೆ ನಡೆಸಿ ನಂತರ ಅನುಮತಿ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ದೇವೇಗೌಡರು, ಕಾವೇರಿ ನದಿ ನೀರಿನ ಸದ್ಬಳಕೆ ಹಾಗೂ ಕುಡಿಯುವ ನೀರು ಪೂರೈಕೆ ಉದ್ದೇಶದಿಂದ ಕರ್ನಾಟಕ ಸರ್ಕಾರ ಕೈಗೆತ್ತಿಕೊಳ್ಳಲಿರುವ ಈ ಯೋಜನೆಯಿಂದ ತಮಿಳುನಾಡಿನ ಹಿತಾಸಕ್ತಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗುವುದಿಲ್ಲ. ಕಾವೇರಿ ನದಿ ನೀರು ಹಂಚಿಕೆ ಮಾಡಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಈ ಯೋಜನೆಯಿಂದ ಉಲ್ಲಂಘನೆಯಾಗದು ಎಂದು ದೇವೇಗೌಡ ಅವರು ಗಡ್ಕರಿ ಅವರಿಗೆ ಮನವರಿಕೆ ಮಾಡಿಕೊಟ್ಟರು.
ಸಮುದ್ರಕ್ಕೆ ವ್ಯರ್ಥವಾಗಿ ಹರಿದುಹೋಗುವ ಕಾವೇರಿಯ ಹೆಚ್ಚುವರಿ ನೀರನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಮೇಕೆದಾಟು ಬಳಿ ಸಮಾನಾಂತರ ಜಲಾಶಯ ನಿರ್ಮಿಸುವ ಯೋಜನೆ ರೂಪಿಸಿರುವ ಕರ್ನಾಟಕ, ಜಲವಿದ್ಯುತ್ ಉತ್ಪಾದನೆ ಹಾಗೂ ಬೆಂಗಳೂರು, ರಾಮನಗರ ಮತ್ತು ಕನಕಪುರ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವ ರೂಪುರೇಷೆ ಸಿದ್ಧಪಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ