ಬೆಂಗಳೂರು:
ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸೆ. 25ರಂದು ಶಾಸಕಾಂಗ ಪಕ್ಷದ ಸಭೆ ಕರೆಯಲು ನಿರ್ಧರಿಸಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದ್ದು, ವಿಧಾನ ಮಂಡಲದ ಉಭಯ ಸದನಗಳ ಸದಸ್ಯರು, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಶಾಸಕರನ್ನು ಪಕ್ಷದಲ್ಲಿಯೇ ಹಿಡಿದಿಟ್ಟುಕೊಳ್ಳುವ ಕುರಿತು ಸಿದ್ದರಾಮಯ್ಯ ಅವರು ಮಾಸ್ಟರ್ಪ್ಲ್ಯಾನ್ ರೂಪಿಸುತ್ತಿದ್ದಾರೆ.
ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಚರ್ಚೆ ಕಾವೇರುತ್ತಿರುವ ಬೆನ್ನಲ್ಲೇ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕಾಂಗ್ರೆಸ್ ಮುಂದಾಗಿದ್ದು, ಕಾಂಗ್ರೆಸ್‌ನ ಆಂತರಿಕ ಗೊಂದಲ, ಆಪರೇಷನ್ ಕಮಲದ ಆತಂಕದ ಬೆಳವಣಿಗೆಗಳ ಮಧ್ಯೆ ನಡೆಯುತ್ತಿರುವ ಈ ಸಭೆ ವಿಶೇಷ ಮಹತ್ವ ಪಡೆದಿದೆ.
ಶುಕ್ರವಾರ ಮಧ್ಯಾಹ್ನ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಸಭೆ ನಡೆಸಿದರು. ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಚಿವ ಡಿ.ಕೆ.ಶಿವಕುಮಾರ್ ಹಾಜರಿದ್ದು ವಿಚಾರ ವಿನಿಮಯ ಮಾಡಿಕೊಂಡರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ