ಬೆಂಗಳೂರು
ನಗದ ಕಂಠೀರವ ಕ್ರೀಡಾಂಗಣದಲ್ಲಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷಾರ್ಥಿಗಳಿಗೆ ತೊಂದರೆ ಎದುರಾಗುವ ಸಾಧ್ಯತೆಯಿದೆ. ಪದಗ್ರಹಣ ಸಮಾರಂಭಕ್ಕೆ ಲಕ್ಷಾಂತರ ಜನ ಆಗಮಿಸಲಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಟ್ರಾಫಿಕ್ ಬಿಸಿ ತಟ್ಟುವ ಆತಂಕವಿದೆ.
ಈ ಹಿನ್ನೆಲೆಯಲ್ಲಿ ಕೆಇಎ ( ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ನಗರ ಸಂಚಾರ ಪೊಲೀಸರ ಮೊರೆ ಹೋಗಿದ್ದು, ಪರ್ಯಾಯ ವ್ಯವಸ್ಥೆ ಮಾಡುವಂತೆ ಕೋರಿದೆ. ಯಾವ ಯಾವ ಸ್ಥಳಗಳಲ್ಲಿ ಟ್ರಾಫಿಕ್ ಸಮಸ್ಯೆ ಎದುರಾಗಬಹುದು ಎಂಬುದನ್ನು ಮನಗಂಡು ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದೆ.
ಮಧ್ಯಾಹ್ನ 12.30ಕ್ಕೆ ಸಿಎಂ, ಡಿಸಿಎಂ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ತೊಂದರೆ ಎದುರಾಗದು. ಆದರೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದೆ.
ವಿಶೇಷವಾಗಿ ತುಮಕೂರು, ಮೈಸೂರು, ಬಳ್ಳಾರಿ ರಸ್ತೆ ಸೇರಿದಂತೆ ನಗರದ ಬಹುತೇಕ ಎಲ್ಲ ಭಾಗಗಳ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸುಗಮ ಸಂಚಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಈ ಬಾರಿಯ ಸಿಇಟಿಗೆ 2.61 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ರಾಜ್ಯಾದ್ಯಂತ 562 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಪೈಕಿ ಬೆಂಗಳೂರಿನಲ್ಲೇ 121 ಕೇಂದ್ರಗಳಿವೆ. ಕಂಠೀರವ ಕ್ರೀಡಾಂಗಣದ ಸುತ್ತಮುತ್ತಲ ಕೆಲ ಕಾಲೇಜುಗಳನ್ನು ಪರೀಕ್ಷಾ ಕೇಂದ್ರಗಳಾಗಿ ಗುರುತಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಬೇಗನೇ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವಂತೆ ಸೂಚಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ