ನವದೆಹಲಿ:
ಇಡೀ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯುಂಟಾಗಿರುವುದರಿಂದ ಮತ್ತು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿರುವುದರಿಂದ NEET-UG 2024 ನ್ನು ಹೊಸದಾಗಿ ನಡೆಸುವುದಾದರೆ ಸಂಪೂರ್ಣ ಪ್ರಕ್ರಿಯೆಯನ್ನು ಕ್ಷಿಪ್ರಗತಿಯಲ್ಲಿ ಮುಗಿಸಬೇಕೆಂದು ಸುಪ್ರೀಂ ಕೋರ್ಟ್ ಗುರುವಾರ ಆದೇಶ ಹೊರಡಿಸಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವ್ಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಇಂದು ವಿವಾದಿತ ವೈದ್ಯಕೀಯ ಪ್ರವೇಶ ಪರೀಕ್ಷೆ NEET-UG 2024 ಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಆದ್ಯತೆಯಾಗಿ ಕೈಗೆತ್ತಿಕೊಂಡಿತು. ವಿಚಾರಣೆ ಆರಂಭವಾಗುತ್ತಿದ್ದಂತೆ ಇದು ಸಾಮಾಜಿಕ ಪರಿಣಾಮ ಬೀರುವ ಪ್ರಕರಣ ಎಂದರು.
ಇಂದು ಸುಪ್ರೀಂ ಕೋರ್ಟ್ ನಲ್ಲಿ ಬೇರೆಲ್ಲಾ ಪ್ರಕರಣಗಳನ್ನು ಬದಿಗಿಟ್ಟು ಆದ್ಯತೆಯಾಗಿ ನೀಟ್-ಯುಜಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಪಟ್ಟ ಅರ್ಜಿಗಳನ್ನು ಕೈಗೆತ್ತಿಕೊಂಡ ನ್ಯಾಯಾಧೀಶರು, ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಇದಕ್ಕಾಗಿ ಕಾಯುತ್ತಿದ್ದಾರೆ, ಈ ಬಗ್ಗೆ ಕೂಲಂಕಷವಾಗಿ ವಿಚಾರಣೆ ನಡೆಸಿ ನಿರ್ಧರಿಸೋಣ ಎಂದರು.
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದರಿಂದ ಮೇ 5ರಂದು ನಡೆದ ಪರೀಕ್ಷೆಯನ್ನು ರದ್ದುಗೊಳಿಸಿ ಮರು ಪರೀಕ್ಷೆ ಮಾಡಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಇಂದು ಕೈಗೆತ್ತಿಕೊಳ್ಳುತ್ತಿದ್ದಂತೆ, ನೀಟ್-ಯುಜಿಯ ಇಡೀ ಪರೀಕ್ಷೆಗೆ ಪಾವಿತ್ರ್ಯತೆಗೆ ಧಕ್ಕೆಯುಂಟಾಗಿರುವುದರಿಂದ ಮರು ಪರೀಕ್ಷೆ ಪ್ರಕ್ರಿಯೆಯನ್ನು ತ್ವರಿತವಾಗಿ ಮುಗಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.
ಈಗ ನಡೆಯುತ್ತಿರುವ ತನಿಖೆಯ ವಿಚಾರವಾಗಿ ಪೀಠವು, “ಸಿಬಿಐ ತನಿಖೆ ಮುಂದುವರೆದಿದೆ, ಸಿಬಿಐ ನಮಗೆ ಹೇಳಿರುವುದು ಬಹಿರಂಗವಾದರೆ, ಅದು ತನಿಖೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಜನರು ಬುದ್ಧಿವಂತರಾಗುತ್ತಾರೆ” ಎಂದು ಹೇಳಿದರು.
NEET-UG ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಪಟ್ಟಂತೆ 40ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಅದರಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA), ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ವಿವಿಧ ಹೈಕೋರ್ಟ್‌ಗಳಲ್ಲಿ ತನ್ನ ವಿರುದ್ಧ ಬಾಕಿ ಇರುವ ಪ್ರಕರಣಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ ಅರ್ಜಿ ಕೂಡ ಸೇರಿದೆ.
ಮೊನ್ನೆ ಜುಲೈ 11 ರಂದು, NEET-UG 2024 ರದ್ದತಿ, ಮರು ಪರೀಕ್ಷೆ ಮತ್ತು ಆಪಾದಿತ ಅಕ್ರಮಗಳ ತನಿಖೆ ಸೇರಿದಂತೆ ಅರ್ಜಿಗಳ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು. ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಪ್ರತಿಕ್ರಿಯೆಗಳು ಇನ್ನೂ ಸಲ್ಲಿಕೆಯಾಗಿಲ್ಲ.
ಈ ವರ್ಷ ಮೇ 5 ರಂದು 14 ಸಾಗರೋತ್ತರ ಸೇರಿದಂತೆ 571 ನಗರಗಳ 4,750 ಕೇಂದ್ರಗಳಲ್ಲಿ 23. 33 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು.
ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ತಮ್ಮ ಅಫಿಡವಿಟ್‌ಗಳಲ್ಲಿ, ಪರೀಕ್ಷೆಯನ್ನು ರದ್ದುಗೊಳಿಸುವುದು ಸರಿಯಲ್ಲ. ಇದರಿಂದ ಲಕ್ಷಗಟ್ಟಲೆ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಸಮಸ್ಯೆ ಮತ್ತು ಅನ್ಯಾಯವಾಗುತ್ತದೆ ಎಂದು ಹೇಳಿದ್ದು, ದೊಡ್ಡ ಪ್ರಮಾಣದ ಗೌಪ್ಯತೆಯ ಉಲ್ಲಂಘನೆಯ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದವು.
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ-ಪದವಿನ್ನು ದೇಶಾದ್ಯಂತ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಎಂಬಿಬಿಎಸ್, ಬಿಡಿಎಸ್, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್‌ಗಳ ಪ್ರವೇಶಕ್ಕಾಗಿ ಪ್ರತಿವರ್ಷ ಎನ್‌ಟಿಎ ನಡೆಸುತ್ತದೆ.
