ಬೋರ್ಡ್‌ ಪರೀಕ್ಷೆ ವಿವಾದ : ಕೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಸುಪ್ರೀಂ

ನವದೆಹಲಿ:

     ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.

    ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ನ್ಯಾಯಪೀಠವು, ಈ ತರಗತಿಗಳ ಪರೀಕ್ಷೆಗಳ ಫಲಿತಾಂಶ ಘೋಷಣೆಗೆ ತಡೆ ನೀಡಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಕಳೆದ ತಿಂಗಳು ಬೋರ್ಡ್ ಪರೀಕ್ಷೆ ನಡೆಸಲಾಗಿತ್ತು.

    5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾರ್ಚ್​ 22ರಂದು ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಎತ್ತಿಹಿಡಿದಿತ್ತು.

    ಸದ್ಯ ಯಾವುದೇ ಶಾಲೆಗಳು ಸಹ ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದವರೆಗೆ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮಾರ್ಚ್​ನಲ್ಲಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದ್ದ ಹೈಕೋರ್ಟ್, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿತ್ತು. ಅದರಂತೆ ಶಾಲೆಗಳು ಪರೀಕ್ಷೆಗಳನ್ನು ನಡೆಸಿದ್ದವು. ಇದೀಗ ಫಲಿತಾಂಶ ಪ್ರಕಟವಾಗುವ ಸಂದರ್ಭದಲ್ಲೇ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಬಂದಿದೆ. 

    ರಾಜ್ಯ ಸರ್ಕಾರದ ಪಠ್ಯಕ್ರಮ ಅನುಸರಿಸುವ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಲು ಮತ್ತು ಅವರಿಗೆ ಮತ್ತು ಅವರ ಪೋಷಕರು, ಶಿಕ್ಷಕರು ಮತ್ತು ಶಾಲಾ ಆಡಳಿತದ ಸಂಕಷ್ಟಕ್ಕೆ ಈ ಆದೇಶ ಕಾರಣವಾಗುತ್ತದೆ. ಕರ್ನಾಟಕ ಹೈಕೋರ್ಟ್‌ನ ಆಕ್ಷೇಪಾರ್ಹ ಆದೇಶವು ಆರ್‌ಟಿಇ ಕಾಯಿದೆಗೆ ಸಮ್ಮತವಾಗಿಲ್ಲ ಎಂದು ತೋರುತ್ತಿದೆ. ಮುಂದಿನ ಆದೇಶದವರೆಗೆ ಫಲಿತಾಂಶ ತಡೆಹಿಡಿಯಬೇಕು. ಯಾವುದೇ ಶಾಲೆಯು ಘೋಷಿಸಿದ ಫಲಿತಾಂಶಗಳನ್ನು ಯಾವುದೇ ಉದ್ದೇಶಕ್ಕಾಗಿ ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.

    ಮಾರ್ಚ್ 22 ರ ತೀರ್ಪಿನಲ್ಲಿ, ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಪರೀಕ್ಷೆಗಳನ್ನು ಸಾಂಪ್ರದಾಯಿಕ ಅರ್ಥದಲ್ಲಿ “ಬೋರ್ಡ್ ಪರೀಕ್ಷೆಗಳು” ಎಂದು ನೋಡಲಾಗುವುದಿಲ್ಲ ಎಂಬ ರಾಜ್ಯದ ವಾದವನ್ನು ಅಂಗೀಕರಿಸಿ ಅದರ ನಡಾವಳಿಯನ್ನು ಪ್ರಶ್ನಿಸುವ ಅರ್ಜಿಗಳನ್ನು ವಜಾಗೊಳಿಸಿತು.

  ​  2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5, 8, 9ನೇ ಹಾಗೂ 11 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು.

    ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್​ ಪರೀಕ್ಷೆಯನ್ನು ರದ್ದುಪಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಮೇಲ್ಮನವಿ ಸಲ್ಲಿಸಿತ್ತು. ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಸರ್ಕಾರದ ಪರ ಎಎಜಿ ವಿಕ್ರಮ್ ಹುಯಿಲಗೋಳ್‌ ಅವರು ಮೇಲ್ಮನವಿಯಲ್ಲಿ ಉಲ್ಲೇಖಿಸಿದ್ದರು. ಬಳಿಕ ಮೇಲ್ಮನವಿಯನ್ನು ಪುರಸ್ಕರಿಸಿದ್ದ ಹೈಕೋರ್ಟ್, ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap