ಬೆಂಗಳೂರು:
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಫೆಬ್ರವರಿ 29ರಂದು ಜಾತಿ ಗಣತಿ ವರದಿ ಸಲ್ಲಿಸಿದೆ. ಈ ಸಂಬಂಧ ಸರ್ಕಾರ ಇನ್ನಷ್ಟೇ ಕ್ರಮಕೈಗೊಳ್ಳಬೇಕಿದೆ ಎಂದು ರಾಜ್ಯ ಸರ್ಕಾರವು ಮಂಗಳವಾರ ಹೈಕೋರ್ಟ್‌ಗೆ ತಿಳಿಸಿದೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ 2014ರ ಜನವರಿ 23ರಂದು ಸರ್ಕಾರ ಆದೇಶಿಸಿರುವುದನ್ನು ರದ್ದು ಮಾಡುವಂತೆ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆ ಸೆಕ್ಷನ್ 9ಕ್ಕೆ ತಂದಿರುವ ತಿದ್ದುಪಡಿ ರದ್ದುಪಡಿಸಲು ಕೋರಿ ಬೀದರ್‌ನ ಶಿವರಾಜ್ ಕಣಶೆಟ್ಟಿ, ಮುಖ್ಯಮಂತ್ರಿ ಚಂದ್ರು ಮತ್ತಿತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ವಕೀಲೆ ನಿಲೋಫರ್ ಅಕ್ಬರ್ ಅವರ ಜೊತೆ ವಿಚಾರಣೆಗೆ ಹಾಜರಾದ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು “ಫೆಬ್ರವರಿ 29ರಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಮುಖ್ಯಮಂತ್ರಿ ಅವರಿಗೆ ವರದಿ ಸಲ್ಲಿಸಿದ್ದಾರೆ. ಸರ್ಕಾರ ಇನ್ನಷ್ಟೇ ಕ್ರಮಕೈಗೊಳ್ಳಬೇಕಿದೆ” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅರ್ಜಿದಾರರ ಪರ ಹಿರಿಯ ವಕೀಲ ಜಿ ಗುರುಮಠ ಅವರು ಮುಂದಿನ ವಿಚಾರಣೆಯವರೆಗೆ ಯಾವುದೇ ದುರುದ್ದೇಶಪೂರಿತ ಕ್ರಮಕೈಗೊಳ್ಳದಂತೆ ನಿರ್ದೇಶಿಸಬೇಕು ಎಂದು ಪೀಠವನ್ನು ಕೋರಿದರು.ಆಗ ಪೀಠವು ವಕೀಲರಿಂದ ವಿಸ್ತೃತ ವಾದ ಆಲಿಸದೇ ನಾವು ಯಾವುದೇ ಆದೇಶ ಮಾಡಲಾಗದು ಎಂದಿತು.
ಅಂತಿಮವಾಗಿ ವರದಿ ಸಲ್ಲಿಕೆಯ ಕುರಿತಾದ ಅಫಿಡವಿಟ್ ಅನ್ನು ಅಧಿಕೃತವಾಗಿ ಸ್ವೀಕರಿಸಿದ ನ್ಯಾಯಾಲಯವು ವಿಚಾರಣೆಯನ್ನು ಮಾರ್ಚ್ 21ಕ್ಕೆ ಮುಂದೂಡಿದೆ.