ದ್ವೇಷ ಭಾಷಣ : ತೇಜಸ್ವಿ ಮತ್ತು ಶೋಭಾ ವಿರುದ್ದ FIR ಗೆ ಹೈಕೋರ್ಟ್‌ ತಡೆ….!

ಬೆಂಗಳೂರು: 

  ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಶುಕ್ರವಾರ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

   ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ತಮಿಳುನಾಡಿನ ವ್ಯಕ್ತಿಯೊಬ್ಬರು ಕಾರಣ ಎಂದು ಶೋಭಾ ಕರಂದ್ಲಾಜೆ ಅವರು ಆರೋಪಿಸಿದ್ದರು. ಈ ಸಂಬಂಧ ಡಿಎಂಕೆ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಚುನಾವಣಾಧಿಕಾರಿಗಳ ದೂರಿನ ಮೇರೆಗೆ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸರು ಶೋಭಾ ಕರಂದ್ಲಾಜೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಿದ್ದರು.

   ಇನ್ನು ಕಳೆದ ಭಾನುವಾರ ನಗರತ್ ಪೇಟೆಯಲ್ಲಿ ‘ಆಜಾನ್’ ಸಂದರ್ಭದಲ್ಲಿ ‘ಹನುಮಾನ್ ಚಾಲೀಸಾ’ ಹಾಕಿದ್ದಕ್ಕಾಗಿ ಅಂಗಡಿಯವನ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ತೇಜಸ್ವಿ ಸೂರ್ಯ ವಿರುದ್ಧ ಹಲಸೂರು ಗೇಟ್ ಪೊಲೀಸರು ಕೇಸ್ ದಾಖಲಿಸಿದ್ದರು.ಈ ಇಬ್ಬರು ಬಿಜೆಪಿ ನಾಯಕರು ತಮ್ಮ ವಿರುದ್ಧದ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್‌ ಅವರ ಪೀಠ, ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ.

   ಇಡೀ ಊರಲ್ಲಿ ಪ್ರತಿಭಟನೆ ನಡೆಸಿದರೆ ಜನ ಓಡಾಡಬೇಡವೇ ಎಂದು ತೇಜಸ್ವಿ ಸೂರ್ಯ ಪರ ವಕೀಲ ಪ್ರಸನ್ನ ಕುಮಾರ್ ಅವರಿಗೆ ಹೈಕೋರ್ಟ್ ಪ್ರಶ್ನಿಸಿದೆ. ಇದಕ್ಕೆ ಪ್ರಸನ್ನ ಕುಮಾರ್ ಪ್ರತಿಕ್ರಿಯಿಸಿ, ಯಾವುದೇ ಕಾನೂನುಬಾಹಿರ ಕೃತ್ಯ ನಡೆದಿಲ್ಲ. ಒಂದೆಡೆ ಸೇರಿ ಘಟನೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಎಂದು ವಾದ ಮಂಡಿಸಿದರು.

   ವಾದ ಆಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್‌ ಅವರಿದ್ದ ಹೈಕೋರ್ಟ್ ಪೀಠ, ಸಿಎಂ ವಿರುದ್ಧ ಪ್ರತಿಭಟನೆ‌ ಸಂಬಂಧ‌ದ ಕೇಸ್‌ಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಸುಪ್ರೀಂಕೋರ್ಟ್ ನೀಡುವ ತೀರ್ಪು ತೇಜಸ್ವಿ ಸೂರ್ಯ ಕೇಸ್‌ಗೂ ಅನ್ವಯವಾಗಬಹುದು ಎಂದು ಹೇಳಿ ಬಿಜೆಪಿ ಸಂಸದನ ವಿರುದ್ಧದ ಕೇಸ್‌ಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದರು.

   ಇನ್ನು ಶೋಭಾ ಕರಂದ್ಲಾಜೆ ಪರ ವಾದ ಮಂಡಿಸಿದ ವಕೀಲ ವೆಂಕಟೇಶ್ ದಳವಾಯಿ ಅವರು, ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಹೇಳಿಕೆ ನೀಡಿಲ್ಲ. ಆದರೂ ಕೇಸ್ ದಾಖಲಿಸಿದ್ದಾರೆ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link