ನವದೆಹಲಿ:
ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5 ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಸಿಬಿಐಗೆ ಈ ಪ್ರಕರಣದಲ್ಲಿ ತನ್ನ ಪ್ರತಿವಾದ ಮತ್ತು ಅಫಿಡವಿಟ್ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತು ಮತ್ತು ಕೇಜ್ರಿವಾಲ್‌ಗೆ ಮರು ಅರ್ಜಿ ಸಲ್ಲಿಸಲು ಎರಡು ದಿನಗಳ ಕಾಲಾವಕಾಶ ನೀಡಿತು. ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಒಂದು ಅರ್ಜಿಗೆ ಮಾತ್ರ ಸಿಬಿಐ ಪ್ರತಿಯಾಗಿ ಅಫಿಡವಿಟ್ ಸಲ್ಲಿಸಿದೆ. ಅದೂ ಕೂಡ ಗುರುವಾರ ರಾತ್ರಿ 8 ಗಂಟೆಗೆ ಸಲ್ಲಿಸಲಾಗಿದೆ ಎಂದು ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು, ಇನ್ನೊಂದು ಅರ್ಜಿಗೆ ಪ್ರತಿಯಾಗಿ ಒಂದು ವಾರದಲ್ಲಿ ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದರು. ಹೀಗಾಗಿ ಸೆಪ್ಟೆಂಬರ್ 5ಕ್ಕೆ ಕೋರ್ಟ್ ವಿಚಾರಣೆಯನ್ನು ಮುಂದೂಡಿತು. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೂನ್ 26 ರಂದು ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು . ಮಾರ್ಚ್ 21 ರಂದು ಇಡಿಯಿಂದ ಬಂಧಿಸಲ್ಪಟ್ಟಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 20 ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಜಾಮೀನು ನೀಡಿತ್ತು. ಆದರೆ, ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಜುಲೈ 12 ರಂದು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತು