ಬೆಂಗಳೂರು
ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯಕ್ಕೆ ಮಂಜೂರಾದ ಹಣವನ್ನು ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ದಾಖಲಾದ ಖಾಸಗಿ ದೂರಿನ ಮೇರೆಗೆ ಇಬ್ಬರು ನಿವೃತ್ತ ಅಧಿಕಾರಿಗಳು ಸೇರಿದಂತೆ ಮೂವರು ಐಎಎಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಆರಂಭಿಸಲಾದ ಕ್ರಿಮಿನಲ್ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯ ಅನುದಾನ ದುರ್ಬಳಕೆ ಆರೋಪ ಎದುರಿಸುತ್ತಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಅಮಿತಾ ಪ್ರಸಾದ್, ಇ.ವಿ. ರಮಣರೆಡ್ಡಿ ಹಾಗೂ ಟಿ.ಎಂ. ವಿಜಯ ಭಾಸ್ಕರ್ ಅವರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.
ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಈ ಮೂವರು ನಿವೃತ್ತ ಐಎಎಸ್ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕರಣ ರದ್ದುಪಡಿಸಿ ಆದೇಶಿಸಿದೆ. ಅರ್ಜಿದಾರರ ಪರ ವಕೀಲ ಪಿ. ಪ್ರಸನ್ನಕುಮಾರ ವಾದ ಮಂಡಿಸಿದ್ದರು.