ಬೆಂಗಳೂರು:
ಭಾನುವಾರ ರಾತ್ರಿ 12 ರಿಂದ ಸೋಮವಾರ ರಾತ್ರಿ 12 ರವರೆಗೆ ನಡೆಯಲಿರುವ ಈ ಖಾಸಗಿ ಸಾರಿಗೆ ಬಂದ್‌ನಿಂದಾಗಿ ಸಾರ್ವಜನಿಕರಿಗೆ ನಗರದಲ್ಲಿ ಓಡಾಟ ನಡೆಸಲು ತೊಂದರೆ ಆಗಲಿದೆ. ಬಂದ್ ಸಂದರ್ಭದಲ್ಲಿ ಬೆಂಗಳೂರು ನಗರ ಹಾಗೂ ಹೊರವಲಯದ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಬಸ್‌ಗಳು ಹೆಚ್ಚುವರಿಯಾಗಿ 4,000 ಟ್ರಿಪ್ ಸಂಚರಿಸಲಿವೆ.
‘ಶಕ್ತಿ’ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು ಅಥವಾ ರಸ್ತೆ ತೆರಿಗೆ ರದ್ದು ಮಾಡಬೇಕು. ರ‍್ಯಾಪಿಡೊ ಬೈಕ್ ಟ್ಯಾಕ್ಸಿ ನಿಷೇಧಿಸಬೇಕು ಎಂಬುದೂ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಇಂದು ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಬಂದ್ ನಡೆಸಲಿದೆ.
ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್. ಮಾರುಕಟ್ಟೆ ಹಾಗೂ ಶಿವಾಜಿನಗರ ಬಸ್ ನಿಲ್ದಾಣಗಳಿಂದ ಕಾಡುಗೋಡಿ, ಸರ್ಜಾಪುರ, ಅತ್ತಿಬೆಲೆ, ಆನೇಕಲ್, ಬನ್ನೇರುಘಟ್ಟ–ಜಿಗಣಿ, ಹಾರೋಹಳ್ಳಿ, ಬಿಡದಿ, ತಾವರೆಕೆರೆ, ನೆಲಮಂಗಲ, ಹೆಸರಘಟ್ಟ, ದೊಡ್ಡಬಳಾಪುರ, ದೇವನಹಳ್ಳಿ, ಬಾಗಲೂರು, ಚನ್ನಸಂದ್ರ, ಹೊಸಕೋಟೆಗೆ ಹಾಗೂ ಹೊರ ವರ್ತುಲ, ಒಳ ವರ್ತುಲ ರಸ್ತೆಗಳಲ್ಲಿ, ನಗರದ ಪ್ರಮುಖ ಸ್ಥಳಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬಸ್ ಸಂಚಾರ ಹೆಚ್ಚಿಸಲು ಯೋಜನೆ ರೂಪಿಸಲಾಗಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಸ್‌ಗಳು 100 ಟ್ರಿಪ್ ಹೆಚ್ಚುವರಿಯಾಗಿ ಸಂಚರಿಸಲಿವೆ. ಅಗತ್ಯ ಬಿದ್ದರೆ ಮತ್ತಷ್ಟು ಟ್ರಿಪ್ ಹೆಚ್ಚಿಸಲಾಗುವುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯಾಣಿಕರ ದಟ್ಟಣೆ ಅವಧಿಯಲ್ಲಿ ಮೆಟ್ರೊ ರೈಲುಗಳ ಸಂಚಾರ ಹೆಚ್ಚಳ ಮಾಡುವುದು ಈಗಲೂ ಇದೆ. ಬಂದ್ ದಿನ ಜನದಟ್ಟಣೆ ಹೆಚ್ಚಿದ್ದರೆ ಆ ಸಂದರ್ಭದಲ್ಲಿ ಟ್ರಿಪ್ ಹೆಚ್ಚಿಸಲಾಗುವುದು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ನಗರದೆಲ್ಲೆಡೆ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೇಂದ್ರ ವಾಣಿಜ್ಯ ಪ್ರದೇಶದಲ್ಲಿ (ಸಿಬಿಡಿ) ಹೆಚ್ಚಿನ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಪ್ರತಿ ಠಾಣೆಯ ವ್ಯಾಪ್ತಿಯಲ್ಲೂ ನಿಗಾ ವಹಿಸುವಂತೆ ಸೂಚಿಸಲಾಗಿದೆ.
ಖಾಸಗಿ ಸಾರಿಗೆ ಒಕ್ಕೂಟದ ಬೇಡಿಕೆ ಈಡೇರಿಕೆ ಬಗ್ಗೆ ಗಮನಿಸುತ್ತೇವೆ. 2016 ರಿಂದ ಱಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ನಡೆಸುತ್ತಿದೆ. ಶಕ್ತಿ ಯೋಜನೆ ಜಾರಿಯಾದ ನಂತರ ಹೆಚ್ಚಿನ ಸಮಸ್ಯೆಯಾಗಿಲ್ಲ. ಹಾಗಾಗಿ ಖಾಸಗಿ ಸಾರಿಗೆ ಒಕ್ಕೂಟದ ಸಮಸ್ಯೆಗಳಿಗೆ ಸ್ಪಂದಿಸುತ್ತೇವೆ. ನಮ್ಮ ಸರ್ಕಾರ ಬಂದ ಮೇಲೆ ವಾಹನ ತೆರಿಗೆ ಹೆಚ್ಚಳ ಮಾಡಿಲ್ಲ.
ಕಳೆದ 4-5 ವರ್ಷಗಳಿಂದ ತೆರಿಗೆ ಹೆಚ್ಚಳ ವಿಚಾರ ಚರ್ಚೆಯಲ್ಲಿತ್ತು. ನಮ್ಮ ಸರ್ಕಾರ ಬಂದ ಬಳಿಕ ತೆರಿಗೆ ಹೆಚ್ಚಳ ಆದೇಶ ಜಾರಿಗೆ ಬಂದಿದೆ. ಖಾಸಗಿ ವಾಹನ ಚಾಲಕರ ಇತರೆ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ. ನಮ್ಮ ಸರ್ಕಾರ ಬಂದ ಮೇಲೆ ಪ್ರಮುಖವಾಗಿ ಎರಡು ಸಮಸ್ಯೆಯಾಗಿದೆ. ಒಂದು ಶಕ್ತಿ ಯೋಜನೆ ಪರಿಣಾಮ ಹಾಗೂ ಇನ್ನೊಂದು ಲೈಫ್ ಟೈಮ್ ಟ್ಯಾಕ್ಸ್ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ರಾಜ್ಯದಲ್ಲಿ ಏಳು ಲಕ್ಷಕ್ಕೂ ಹೆಚ್ಚು ಖಾಸಗಿ ವಾಹನಗಳು ಕಾರ್ಯನಿರ್ವಹಿಸುತ್ತಿವೆ. 1.6 ಲಕ್ಷಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಲ್ಲಿ ಕ್ಯಾಬ್‌ಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿಭಟನೆಯಲ್ಲಿ ಒಂದು ಲಕ್ಷ ಏರ್‌ಪೋರ್ಟ್ ಕ್ಯಾಬ್‌ಗಳ ಚಾಲಕರು ಪಾಲ್ಗೊಂಡರೂ ಸರ್ಕಾರಕ್ಕೆ ಇದರ ಬಿಸಿ ತಟ್ಟಲಿದೆ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಅವರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ