ಒಂದು ವಾರದೊಳಗೆ ಬರ ಪರಿಹಾರ : ಸುಪ್ರೀಂ ಕೋರ್ಟ್‌ ನಲ್ಲಿ ಕೇಂದ್ರದ ಹೇಳಿಕೆ

ಬೆಂಗಳೂರು:

    ರಾಜ್ಯದ ರೈತರಿಗೆ ಒಂದು ವಾರದೊಳಗೆ ಬರ ಪರಿಹಾರ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಇಂದು ಒಪ್ಪಿಕೊಂಡಿದೆ.

    ಕರ್ನಾಟಕಕ್ಕೆ ಬರ ಪರಿಹಾರ ನಿಧಿ ಬಂದಿಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ಕಾಂಗ್ರೆಸ್​ ಸರ್ಕಾರ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.

    ಏಪ್ರಿಲ್ 29ರೊಳಗೆ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್​​​​ ವೆಂಕಟರಮಣಿ ನ್ಯಾಯ ಪೀಠಕ್ಕೆ ಹೇಳಿದರು. ಇನ್ನು ಹಿರಿಯ ವಕೀಲರ ಅಲಭ್ಯತೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ರಾಜ್ಯ ಸರಕಾರದ ಪರ ವಕೀಲರು ಕೇಳಿಕೊಂಡ‌ರು. ವಾದ-ಪ್ರತಿವಾದವನ್ನು ಆಲಿಸಿದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್​ 29ಕ್ಕೆ ಮುಂದೂಡಿತು. 

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬರ ಪರಿಹಾರ ವಿಳಂಬ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಸ್ಥಿಕೆಗೆ ಧನ್ಯವಾದ ಸಲ್ಲಿಸಿದ್ದಾರೆ.

    2023ರ ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾಗಿದ್ದ ನಮ್ಮ ಮನವಿ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳದ ಕಾರಣ ಬರ ಪರಿಹಾರ ಹಣಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇದೊಂದು ಮೈಲಿಗಲ್ಲು ಆಗಿದೆ. ನ್ಯಾಯ ರಕ್ಷಣೆ ಹಾಗೂ ರಾಜ್ಯದ ಜನರ ಬರ ಪರಿಹಾರಕ್ಕಾಗಿ ನಡೆಸಿದ ಸುಧೀರ್ಘ ಹೋರಾಟಕ್ಕೆ ಯಶಸ್ಸು ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap