ಜಂಟಿ ಸಮನ್ವಯ ಸಭೆ : ಭಿನ್ನಮತ ಶಮನಕ್ಕೆ ಮಹೂರ್ತ ಫಿಕ್ಸ್‌

ಬೆಂಗಳೂರು

   ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಅನ್ನು ಲೋಕಸಭಾ ಚುನಾವಣೆಯಲ್ಲಿ ಹೇಗಾದರೂ ಸೋಲಿಸುವ ಪಣ ತೊಟ್ಟಿರುವ ಬಿಜೆಪಿ ಮತ್ತು ಜೆಡಿಎಸ್ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಆದರೆ, ಎರಡು ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಮಾತ್ರ ವೇದಿಕೆಗಳಲ್ಲಿಯೇ ಕಿತ್ತಾಡಿಕೊಳ್ಳುತ್ತಿದ್ದಾರೆ.

    ಹೀಗಾಗಿಯೇ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಎರಡೂ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರ ನಡುವೆ ಸರಿಯಾದ ಸಂಬಂಧವನ್ನು ಖಚಿತಪಡಿಸಿಕೊಳ್ಳಲು ಬಿಜೆಪಿ ಮತ್ತು ಜೆಡಿಎಸ್ ನಾಯಕರ ಜಂಟಿ ಸಮನ್ವಯ ಸಭೆಯನ್ನು ಆಯೋಜಿಸಿದ್ದಾರೆ. ಮಾರ್ಚ್ 29 ರಂದು ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ ಎಂದು ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

    ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಕಳೆದ ಸೆಪ್ಟೆಂಬರ್‌ನಲ್ಲಿ ಜೆಡಿಎಸ್ ಎನ್‌ಡಿಎಗೆ ಸೇರ್ಪಡೆಗೊಂಡಿತು. ಬಳಿಕ ರಾಜ್ಯದಲ್ಲಿ ಬಿಜೆಪಿಯೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಂಡಿದೆ. ಒಪ್ಪಂದದ ಪ್ರಕಾರ ಜೆಡಿಎಸ್ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ, ಹಾಸನ ಮತ್ತು ಕೋಲಾರ ಮೂರು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

    “ಮಾರ್ಚ್ 29 ರಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸಮನ್ವಯ ಸಭೆ ಕರೆಯುವ ಕುರಿತು ನಾನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಮೇಲಿನಿಂದ ಕೆಳಗಿನವರೆಗೆ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಸರಿಯಾದ ತಿಳುವಳಿಕೆ ಇರುವುದು ಅವಶ್ಯಕ” ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. 

   ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಾಗ ಆಗಿರುವ ತಪ್ಪುಗಳು ಮರುಕಳಿಸಬಾರದು ಎಂದಿದ್ದಾರೆ. “ಎರಡೂ ಪಕ್ಷಗಳ (ಬಿಜೆಪಿ-ಜೆಡಿಎಸ್) ನಡುವೆ ನಂಬಿಕೆಯೊಂದಿಗೆ, ಚುನಾವಣಾ ಪ್ರಚಾರವು ಸುಲಭವಾಗಿ ನಡೆಯಬೇಕು. ಹೀಗಾಗಿ ಮಾರ್ಚ್ 29 ರಂದು ಸಭೆ ಕರೆಯಲಾಗಿದೆ. ಸಭೆಯಲ್ಲಿ ಎರಡೂ ಪಕ್ಷಗಳ ನೂರಕ್ಕೂ ಹೆಚ್ಚು ನಾಯಕರು ಭಾಗವಹಿಸುತ್ತಾರೆ” ಎಂದು ಮಾಹಿತಿ ನೀಡಿದ್ದಾರೆ.

    ಈ ಹಿಂದೆ 2018ರ ಮೇ ತಿಂಗಳಿನಿಂದ 14 ತಿಂಗಳ ಕಾಲ ಕಾಂಗ್ರೆಸ್‌ನೊಂದಿಗೆ ಸಮ್ಮಿಶ್ರವಾಗಿ ಜೆಡಿಎಸ್‌ ಸರ್ಕಾರ ರಚಿಸಿದ್ದು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಎರಡೂ ಪಕ್ಷಗಳು 2019 ರ ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡಿ ತಲಾ ಒಂದು ಸ್ಥಾನವನ್ನು ಪಡೆದಿದ್ದರೆ, ಬಿಜೆಪಿ 25 ಸ್ಥಾನಗಳನ್ನು ಗಳಿಸಿತ್ತು. ಮಂಡ್ಯದಲ್ಲಿ ಸುಮಲತಾಗೆ ಬಿಜೆಪಿ ಬೆಂಬಲ ನೀಡಿತ್ತು. 

   ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಗೆಲ್ಲಬೇಕಿದ್ದರೇ ಪಕ್ಷಗಳ ಕಾರ್ಯಕರ್ತರ ನಡುವೆ ತಳಮಟ್ಟದ ಸಮನ್ವಯ ಮತ್ತು ತಿಳುವಳಿಕೆ ಮತ್ತು ಪರಸ್ಪರ ಮತಗಳನ್ನು ನೀಡುವುದು ಅತ್ಯಗತ್ಯ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗೆಇನ ಮೈತ್ರಿಯಲ್ಲಿ ಇದು ನಡೆದಿಲ್ಲ.

   ಇನ್ನು, ಬುಧವಾರ ಮೈಸೂರಿನಲ್ಲಿ ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರದ ಉಭಯ ಪಕ್ಷಗಳ ಜಂಟಿ ಸಮನ್ವಯ ಸಮಿತಿ ಹಾಗೂ ಕಾರ್ಯಕರ್ತರ ಸಭೆ ನಡೆಯಲಿದೆ. ಕೊಪ್ಪಳ, ತುಮಕೂರಿನಲ್ಲೂ ಇದೇ ರೀತಿ ಸಭೆ ನಡೆಸಿ, ಇತರೆ ಜಿಲ್ಲೆಗಳಿಗೂ ಸಭೆ ಆಯೋಜಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap