ಬೆಂಗಳೂರು:
ದೆಹಲಿ ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸೋಮವಾರ ರಾಜ್ಯಕ್ಕೆ ವಾಪಸಾಗಲಿದ್ದು ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವರ ಮುಂದಿನ ಕ್ರಮದ ಕುರಿತು ತೀವ್ರ ಕುತೂಹಲಗಳು ಮೂಡಿವೆ.ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪದ ಪ್ರಕರಣದಲ್ಲಿ ಮುಖ್ಯಮಂತ್ರಿ ಅವರಿಗೆ ಜು.26ರಂದು ಶೋಕಾಸ್ ನೋಟಿಸ್ ನೀಡಿದ ಬಳಿಕ ರಾಜ್ಯಪಾಲರು ದೆಹಲಿ ಪ್ರವಾಸಕ್ಕೆ ತೆರಳಿದ್ದರು.
ಇದರ ನಡುವೆ ನೋಟಿಸ್ ವಾಪಸ್ ಪಡೆಯಲು ಸಂಪುಟ ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಕಳುಹಿಸಿದೆ. ಮತ್ತೊಂದೆಡೆ ನೋಟಿಸ್‌ಗೆ ಮುಖ್ಯಮಂತ್ರಿ ಅವರು ಉತ್ತರವನ್ನೂ ಕೊಟ್ಟಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ಆರಂಭಿಸಿರುವುದು ಸೇರಿದಂತೆ ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆದಿವೆ.
ಇದೀಗ ರಾಜ್ಯಪಾಲರು ಸೋಮವಾರ ಮಧ್ಯಾಹ್ನದ ವೇಳೆಗೆ ರಾಜ್ಯಕ್ಕೆ ವಾಪಸ್ಸಾಗಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸುವ ವಿಚಾರವಾಗಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದು ಸಾರ್ವಜನಿಕ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ನವದೆಹಲಿಗೆ ಭೇಟಿ ನೀಡಿದ್ದ ರಾಜ್ಯಪಾಲರು ಬಿಜೆಪಿ ಹೈಕಮಾಂಡ್ ಮತ್ತು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ಅನುಮತಿ ನೀಡಿದ್ದೇ ಆದರೆ, ಅದಕ್ಕೆ ಸಾಂವಿಧಾನಿಕ ಮತ್ತು ರಾಜಕೀಯ ಪರಿಣಾಮಗಳು ಎದುರಾಗಬಹುದು ಎಂಬುದು ತಜ್ಞರ ಅಭಿಪ್ರಾಯಪಟ್ಟಿದ್ದಾರೆ.
ಸಿಎಂ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಈಗಾಗಲೇ ಸಚಿವ ಸಂಪುಟ ರಾಜ್ಯಪಾಲರಿಗೆ ಉತ್ತರ ನೀಡಿರುವುದರಿಂದ ರಾಜ್ಯಪಾಲರು ನಿರ್ಣಯ ಕೈಗೊಳ್ಳಲು ಸಮಯ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.ಈ ನಡುವೆ ಬಿಜೆಪಿ ಹೈಕಮಾಂಡ್ ಆತುರದ ನಿರ್ಧಾರ ಕೈಗೊಳ್ಳದಂತೆ ರಾಜ್ಯ ಬಿಜೆಪಿ ನಾಯಕರಿಗೆ ರಾಜ್ಯಪಾಲರ ಮೂಲಕ ಸಲಹೆಯನ್ನೂ ರವಾನಿಸಿದೆ ಎಂದು ವರದಿಗಳು ತಿಳಿಸಿವೆ.
ಏತನ್ಮಧ್ಯೆ, ಮುಡಾ ಪ್ರಕರಣದ ಕುರಿತು ಹೆಚ್ಚಿನ ವಿವರಗಳನ್ನು ನೀಡಲು ಅಬ್ರಹಾಂ ಶುಕ್ರವಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಲು ಯತ್ನಿಸಿದ್ದು, ಈ ಯತ್ನ ಸಫಲಗೊಂಡಿಲ್ಲ ಎಂದು ತಿಳಿದುಬಂದಿದೆ.ಬಳಿಕ ಅಬ್ರಹಾಂ ಅವರು ಸೋಮವಾರ ರಾಜ್ಯಪಾಲರನ್ನು ಭೇಟಿ ಮಾಡಲು ಮುಂದಾಗಿದ್ದು, ಈ ಭೇಟಿಯನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ ಎಂದು ಎನ್ನಲಾಗಿದೆ.
ಇದೇ ವೇಳೆ, ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ಅನುಮತಿ ನೀಡಿದ್ದಾರೆ ಆದರೆ, ಶೀಘ್ರದಲ್ಲೇ ರಾಜಭವನ ಚಲೋ ನಡೆಸಲು ಸಿಎಂ ಸಿದ್ದರಾಮಯ್ಯ ಬೆಂಬಲಿಗರು ಮುಂದಾಗಿದ್ದಾರೆಂದು ತಿಳಿದುಬಂದಿದೆ.ಆಗಸ್ಟ್ 9 ರಂದು ಕಾಂಗ್ರೆಸ್ ಪಕ್ಷದ ಸಮಾವೇಶ ಮುಕ್ತಾಗೊಳ್ಳಳಿದ್ದು, ಬಳಿಕ ಈ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ. ರಾಜ್ಯಪಾಲರು ಸಿಎಂ ವಿರುದ್ಧ ಕ್ರಮಕೈಗೊಂಡರೆ, ನಾವು ರಾಜಭವನಕ್ಕೆ ಮುತ್ತಿಗೆ ಹಾಕಲು ಸಿದ್ಧರಿದ್ದೇವೆ ಎಂದು ಶೋಷಿತ ಸಮುದಾಯಗಳ ಒಕ್ಕೂಟದ ಸಂಚಾಲಕರಾದ ರಾಮಚಂದ್ರಪ್ಪ ಮತ್ತು ಮಾವಳ್ಳಿ ಶಂಕರ್ ಹೇಳಿದ್ದಾರೆ.