ಬೆಂಗಳೂರು:
ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಮುಖ ಕಾಮಗಾರಿ ನಡೆಸುವ 5 ಇಲಾಖೆಗಳಲ್ಲಿ ಶೇ.40 ಕಮಿಷನ್ ಆರೋಪ ಕುರಿತು ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ್ದ ಆರೋಪ ಕುರಿತು ತನಿಖೆಗೆ ರಚಿಸಲಾಗಿದ್ದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ವಿಚಾರಣಾ ಆಯೋಗವು ರಾಜ್ಯ ಸರ್ಕಾರಕ್ಕೆ ಬುಧವಾರ ವರದಿಯನ್ನು ಸಲ್ಲಿಸಿದೆ.
ನಿವೃತ್ತ ನ್ಯಾ.ನಾಗಮೋಹನ್ ದಾಸ್ ನೇತೃತ್ವದ ವಿಚಾರಣಾ ಆಯೋಗವು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, 20 ಸಾವಿರ ಪುಟಗಳ ವರದಿಗಳನ್ನು ಸಿಎಂಗೆ ಸಲ್ಲಿಕೆ ಮಾಡಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಟೆಂಡರ್ ಕಾಮಗಾರಿಗಳಲ್ಲಿ ಶೇ.40 ಕಮಿಷನ್ ಇದೆ ಎಂದು ರಾಜ್ಯ ಗುತ್ತಿಗೆದಾರರ ಸಂಘವು ಗಂಭೀರವಾಗಿ ಆರೋಪಿಸಿತ್ತು. ಆದರೆ, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿತ್ತು. ಹಗರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು.
ಗಂಭೀರ ಆರೋಪಗಳು ಕೇಳಿಬಂದ ಬೆನ್ನಲ್ಲೇ 26-7-2019 ರಿಂದ 31.03.2023ರ ವರೆಗೆ ನಡೆದಿರೋ ಕಾಮಗಾರಿಗಳ ಬಗ್ಗೆ ತನಿಖೆ ವರದಿ ಸಲ್ಲಿಕೆ ಮಾಡುವಂತೆ ಸರ್ಕಾರ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ವೈಜ್ಞಾನಿಕವಾಗಿ ಯಾದೃಚ್ಛಿಕ ಮಾದರಿಯಲ್ಲಿ ಪೂರ್ಣಗೊಂಡ ಕಾಮಗಾರಿಗಳನ್ನ ಆಯ್ಕೆ ಮಾಡಿಕೊಂಡು ಆಯೋಗ ತನಿಖೆ ನಡೆಸಿತ್ತು. ಈ ಆಯ್ಕೆಯಲ್ಲಿ ಎಲ್ಲಾ ಜಿಲ್ಲೆಗಳು, ಎಲ್ಲಾ ಮಾದರಿಯ ಕಾಮಗಾರಿಗಳು ಹಾಗೂ ಎಲ್ಲಾ ಮೊತ್ತದ ಕಾಮಗಾರಿಗಳನ್ನ ಪರಿಗಣಿಸಿ ಆಯೋಗ ತನಿಖೆ ನಡೆಸಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ.
ಬಜೆಟ್ ಅಧಿವೇಶನ ನಡೆಯುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸುತ್ತಿದೆ. ಇದರ ನಡುವಲ್ಲೇ ಬಿಜೆಪಿ ವಿರುದ್ಧ ಆಯೋಗ ಸಲ್ಲಿಸಿರುವ ವರದಿಯು ವಿಪಕ್ಷಗಳಿಗೆ ತಿರುಗೇಟು ನೀಡಲು ಸರ್ಕಾರಕ್ಕೆ ಹೊಸ ಅಸ್ತ್ರ ಸಿಕ್ಕಂತಾಗಿದೆ. ಈ ನಡುವೆ ವರದಿಗಳನ್ನು ಸಚಿವ ಸಂಪುಟದ ಮುಂದೆ ಇಡಲಾಗುವುದು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
