ಬೆಳಗಾವಿ :
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಯಾವುದೇ ರೀತಿಯ ಶೀತಲ ಸಮರದ ಬಗ್ಗೆ ನನಗೆ ತಿಳಿದಿಲ್ಲ. ನಮ್ಮ ನಡುವೆ ಯಾವುದೇ ವಾರ್ ಇಲ್ಲ. ಈ ಕೋಲ್ಡ್ ವಾರ್, ಹಾಟ್ ವಾರ್ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ.
ಇಬ್ಬರೂ ನಾಯಕರ ನಡುವೆ ಎಂದಿಗೂ ಯಾವುದೇ ಭಿನ್ನಾಭಿಪ್ರಾಯಗಳು ಎದುರಾಗಿಲ್ಲ. 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುವುದನ್ನು ಖಚಿತಪಡಿಸಿಕೊಳ್ಳಲು ನಾವು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.
ಮಂಗಳವಾರ ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಹೆಬ್ಬಾಳ್ಕರ್, ಕೇವಲ ಸಚಿವೆಯಾಗಿ ಮಾತ್ರವಲ್ಲದೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿಯೂ ನನ್ನ ಮೇಲೆ ದೊಡ್ಡ ಜವಾಬ್ದಾರಿ ಇದೆ. ರಾಜ್ಯದಲ್ಲಿ ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ 36,000 ಕೋಟಿ ರೂ.ಗಳನ್ನು ವಿತರಿಸುವ ಕೆಲಸವನ್ನು ನಿರ್ವಹಿಸಿದ್ದೇನೆ ಎಂದು ಅವರು ಹೇಳಿದರು.
