ಬೆಂಗಳೂರು:
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಉಪಾಹಾರ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಚರ್ಚೆ ನಡೆದಿಲ್ಲ.. ಸಿಎಂ ಗಾದಿ ಬದಲಾವಣೆ ಬಗ್ಗೆ ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಾರಿಗ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಕುರಿತು ಚರ್ಚಿಸಲು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಚಿವರೊಂದಿಗೆ ಸಭೆ ಕರೆದಿದ್ದು, ಈ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ 19 ಸಚಿವರು ಭಾಗವಹಿಸಿದ್ದರು.
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಯಾವುದೇ ಚರ್ಚೆ ನಡೆದಿಲ್ಲ, ಈ ಬಗ್ಗೆ ಮಾತನಾಡದಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ. ಸಿಎಂ ಮತ್ತು ಉಪ ಮುಖ್ಯಮಂತ್ರಿ ಬಗ್ಗೆ ಯಾವುದೇ ಗೊಂದಲವಿಲ್ಲ. ಅಭಿವೃದ್ಧಿ ಕಾಮಗಾರಿ ಬಿಟ್ಟು ಏನೂ ಮಾತನಾಡಬಾರದು ಎಂದು ಹೈಕಮಾಂಡ್ ಹೇಳಿದೆ. ಅಲ್ಲದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕೆಲ ದಿನಗಳ ಹಿಂದೆ ಈ ಬಗ್ಗೆ ಮಾತನಾಡದಂತೆ ನಿರ್ದೇಶನ ನೀಡಿರುವುದರಿಂದ ಬಹಿರಂಗ ಹೇಳಿಕೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.