ಸೌಲಭ್ಯವೇ ಇಲ್ಲದ ಶಾಲೆಗಳಿಂದ ಸಮಾಜ ನಿರ್ಮಾಣ ಹೇಗೆ ಸಾಧ್ಯ : ಹೈಕೋರ್ಟ್‌

ಬೆಂಗಳೂರು:

    ‘ರಾಜ್ಯದ ಕೆಲವು ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ಕೊರತೆ ಮತ್ತು ಶೌಚಾಲಯಗಳಿಗೆ ನೀರಿನ ಸೌಲಭ್ಯ ಇಲ್ಲ. ಕುಡಿಯುವ ನೀರನ್ನು ಹೊತ್ತು ತರುವ ಪರಿಸ್ಥಿತಿ ಇದೆ. ಇಂತಹ ಶಾಲೆಗಳಿಂದ ಯಾವ ರೀತಿಯ ಸಮಾಜದ ನಿರ್ಮಾಣ ಸಾಧ್ಯ’ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಹೈಕೋರ್ಟ್, ‘ಸರ್ಕಾರಿ ಶಾಲೆಗಳ ದುಃಸ್ಥಿತಿ ಗಮನಿಸಿದರೆ ಆತ್ಮಸಾಕ್ಷಿಗೆ ಆಘಾತವಾಗುತ್ತಿದೆ’ ಎಂದು ತೀವ್ರ ಕಳವಳ ವ್ಯಕ್ತಪಡಿಸಿದೆ.

    ಈ ಕುರಿತಂತೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

    ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಸಲ್ಲಿಸಿದ ವರದಿ ಮತ್ತು ಛಾಯಾಚಿತ್ರಗಳನ್ನು ಪರಿಶೀಲಿಸಿದ ನ್ಯಾಯಪೀಠ, ‘ಶಾಲೆಗಳಲ್ಲಿ ಶೌಚಾಲಯಗಳ ಸ್ಥಿತಿ ಅತ್ಯಂತ ಕರುಣಾಜನಕವಾಗಿದೆಯಲ್ಲಾ, ಈ ರೀತಿಯ ವರದಿ ಸಲ್ಲಿಸಿರುವ ಅಧಿಕಾರಿಯ ಮನೆಯಲ್ಲಿಯೂ ಇದೇ ಪರಿಸ್ಥಿತಿ ಇದೆಯೇ’ ಎಂದು ಕುಟುಕಿತು.

    ನ್ಯಾಯಮೂರ್ತಿ ಎಂ.ಜೆ.ಎಸ್.ಕಮಲ್, ‘ಸೂಕ್ತ ಶೌಚಾಲಯ ಕಲ್ಪಿಸಿಲ್ಲ ಎಂದು ಕೋರ್ಟ್‌ಗೆ ಹೇಳುವಷ್ಟು ಧೈರ್ಯ ಅಧಿಕಾರಿಗೆ ಹೇಗೆ ಬಂತು? ಇವರೆಲ್ಲಾ ತಮ್ಮ ಮಕ್ಕಳನ್ನೂ ಇಂತಹ ಶಾಲೆಗಳಿಗೆ ಕಳುಹಿಸಲು ಮುಂದಾಗುತ್ತಾರೆಯೇ’ ಎಂದು ಪಶ್ನಿಸಿದರು. ‘ಅಧಿಕಾರಿಗಳ ಚಲ್ತಾ ಹೈ ಮನೋಭಾವ ಸಹಿಸುವುದಿಲ್ಲ’ ಎಂದು ಎಚ್ಚರಿಸಿದರು.

   ‘ಸರ್ಕಾರಿ ಶಾಲೆಗಳಲ್ಲಿನ ಮೂಲಸೌಕರ್ಯಗಳ ಪರಿಸ್ಥಿತಿ ಏನಿದೆ ಎಂಬುದರ ಕುರಿತಂತೆ ಮುಂದಿನ ಮೂರು ತಿಂಗಳಲ್ಲಿ ಮರು ಸಮೀಕ್ಷೆ ನಡೆಸಬೇಕು. ಈ ಸಮೀಕ್ಷೆಯ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ (ಕೆಎಸ್‌ಎಲ್‌ಎಸ್‌ಎ) ಸದಸ್ಯ ಕಾರ್ಯದರ್ಶಿಗಳೂ ಭಾಗಿಯಾಗುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap