ಬೆಂಗಳೂರು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ಗೂ ಸಂಕಷ್ಟ ಶುರುವಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಹಳೆಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 2020 ರಲ್ಲಿ ಹೆಬ್ಬಾಳ್ಕರ್ ಅವರ ಸಹೋದರಿಯ ಮಗಳ ವಿವಾಹ ಸಮಾರಂಭದಲ್ಲಿ ತೆಗೆದ ಫೋಟೋವನ್ನು ಸಚಿವರು ತಮ್ಮ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಂಡಿದ್ದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಶೇಖರ್ ಕಲ್ಲೋಳ್ಕರ್ ಮಾತನಾಡಿ, ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಅವರ ವೈರಲ್ ಚಿತ್ರ ನನ್ನ ಕಣ್ಣಿಗೆ ಬಿದ್ದಿದೆ. ನೋಟಿಸ್ ನೀಡಲಾಗುತ್ತಿದ್ದು, ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಪೆಂಡೆಂಟ್ ಸಂಗ್ರಹಿಸಲಿದ್ದಾರೆ.
ಅದು ಅಸಲಿಯೋ ಅಥವಾ ನಕಲಿಯೋ ಎಂಬುದನ್ನು ದೃಢಪಡಿಸಲು ಪರೀಕ್ಷೆಗೆ ಕಳುಹಿಸಲಾಗುವುದು ಎಂದಿದ್ದಾರೆ. ಮೃಣಾಲ್ ಯುವ ಕಾಂಗ್ರೆಸ್ ನಾಯಕರಾಗಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
