ನವದೆಹಲಿ:
ಪ್ರಧಾನಿ ನರೇಂದ್ರ ಮೋದಿ ಅವರು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನ್ಸಿಯೊ ಲುಲಾ ಡ ಸಿಲ್ವಾ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು ಮತ್ತು ವ್ಯಾಪಾರ, ತಂತ್ರಜ್ಞಾನ, ಇಂಧನ, ರಕ್ಷಣೆ, ಕೃಷಿ, ಆರೋಗ್ಯ ಮತ್ತು ಜನರಿಂದ ಜನರಿಗೆ ಸಂಬಂಧಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಇಬ್ಬರೂ ನಾಯಕರು ಒಪ್ಪಿಕೊಂಡರು ಎಂದು ಪಿಎಂಒ ತಿಳಿಸಿದೆ.
ಭಾರತೀಯ ಸರಕುಗಳ ಮೇಲೆ ಶೇಕಡಾ 25 ರಷ್ಟು ಹೆಚ್ಚುವರಿ ಸುಂಕವನ್ನು ವಿಧಿಸುವ ಕಾರ್ಯಕಾರಿ ಆದೇಶವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊರಡಿಸಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿರುವುದು ಮಹತ್ವ ಪಡೆದುಕೊಂಡಿದೆ.
ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಮೋದಿ ಮತ್ತು ಬ್ರೆಜಿಲ್ ಅಧ್ಯಕ್ಷರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಹೇಳಿಕೆಯಲ್ಲಿ ತಿಳಿಸಿದೆ.
ನಂತರ, ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಮೋದಿ, “ಅಧ್ಯಕ್ಷ ಲೂಲಾ ಅವರೊಂದಿಗೆ ಉತ್ತಮ ಸಂಭಾಷಣೆ ನಡೆಸಿದೆ. ನನ್ನ ಬ್ರೆಜಿಲ್ ಭೇಟಿಯನ್ನು ಸ್ಮರಣೀಯ ಮತ್ತು ಅರ್ಥಪೂರ್ಣವಾಗಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ವ್ಯಾಪಾರ, ಇಂಧನ, ತಂತ್ರಜ್ಞಾನ, ರಕ್ಷಣೆ, ಆರೋಗ್ಯ ಮತ್ತು ಇನ್ನೂ ಹೆಚ್ಚಿನದನ್ನು ಒಳಗೊಂಡಂತೆ ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಆಳಗೊಳಿಸಲು ನಾವು ಬದ್ಧರಾಗಿದ್ದೇವೆ. ಜಾಗತಿಕ ದಕ್ಷಿಣ ರಾಷ್ಟ್ರಗಳ ನಡುವಿನ ಬಲವಾದ, ಜನ-ಕೇಂದ್ರಿತ ಪಾಲುದಾರಿಕೆ ಎಲ್ಲರಿಗೂ ಪ್ರಯೋಜನವನ್ನು ನೀಡುತ್ತದೆ.” ಎಂದು ತಿಳಿಸಿದ್ದಾರೆ.
