ಬೆಂಗಳೂರು:
ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ಬಳಕೆ ಮಾಡಿಕೊಂಡು ಸಂಸದರಾಗಿ ಆಯ್ಕೆಯಾದ ಇ.ತುಕಾರಾಂ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಬಿಜೆಪಿ ಸೋಮವಾರ ಆಗ್ರಹಿಸಿದೆ.ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾಗಿ ಬಂಧಿತರಾಗಿರುವ ನಾಗೇಂದ್ರ ಅವರು ಜಾರಿ ನಿರ್ದೇಶನಾಲಯದ ನ್ಯಾಯಾಲಯಕ್ಕೆ ಸಲ್ಲಿಸಿದ ರಿಮಾಂಡ್ ಅರ್ಜಿಯಲ್ಲಿ ಚುನಾವಣೆಗೆ ರೂ.29.19 ಕೋಟಿ ಬಳಕೆ ಆಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.
ನಾಗೇಂದ್ರ ಅವರು ರೂ.29.19 ಕೋಟಿಯನ್ನು ಲೋಕಸಭಾ ಚುನಾವಣೆಗೆ ದುರ್ಬಳಕೆ ಮಾಡಿದಕ್ಕೆ ದಾಖಲೆ ಸಿಕ್ಕಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಪ್ಪಿಗೆ ಮತ್ತು ಕುಮ್ಮಕ್ಕು ಇಲ್ಲದೇ ಈ ಹಣವನ್ನು ಬಳಸಲು ಸಾಧ್ಯವೇ ಇಲ್ಲ. ಹೀಗಾಗಿ ಚುನಾವಣಾ ಅಕ್ರಮದ ಕುರಿತು ಇನ್ನಷ್ಟು ಆಳವಾದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದೆ. ಬಡವರ ಹಣವನ್ನು ಚುನಾವಣೆಗೆ ಬಳಸಿಕೊಂಡು ಯಾರು ಸಂಸದರಾಗಿ ಆಯ್ಕೆಯಾಗಿದ್ದಾರೋ ಅವರ ಆಯ್ಕೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದೆ.
ತುಕಾರಾಂ ಅವರನ್ನು ಅನರ್ಹಗೊಳಿಸುವಂತೆ ಆಗ್ರಹಿಸಿ ಇತ್ತೀಚೆಗೆ ಮಾಜಿ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಶೀಘ್ರದಲ್ಲೇ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಬಳ್ಳಾರಿ ಜಿಲ್ಲಾಧಿಕಾರಿ ಮೂಲಕ ಮನವಿ ಪತ್ರ ಸಲ್ಲಿಸಲಾಗುವುದು ಎಂದೂ ಹೇಳಿದೆ.