ತುಮಕೂರು :
ಕೊರೊನಾ 2ನೇ ಅಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 60 ವರ್ಷ ಮೇಲ್ಪಟ್ಟ ನಾಗರಿಕರನ್ನು ಕರೆತಂದು ಕಡ್ಡಾಯವಾಗಿ ಕೊರೊನಾ ಲಸಿಕೆ ಪಡೆಯುವ ವ್ಯವಸ್ಥೆ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ತೆರಿಗೆ ವಸೂಲಾತಿ ಹಾಗೂ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಕೊರೊನಾ 2ನೇ ಅಲೆ ಹರಡುತ್ತಿದ್ದು, ಜಿಲ್ಲೆಯಲ್ಲಿ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮೀಕ್ಷೆ ಮಾಡಿ, ಇದಕ್ಕಾಗಿ ವಾರ್ಡ್ ಸದಸ್ಯರು/ಮಾಜಿ ವಾರ್ಡ್ ಸದಸ್ಯರ ಸಹಕಾರ ಪಡೆದು 60 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಪಡೆಯಲು ವ್ಯವಸ್ಥೆ ಮಾಡಬೇಕು. ಕೊರೊನಾ ಬಗ್ಗೆ ಭಯಪಡದಂತೆ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿ ಹೇಳಬೇಕು ಎಂದರು.
ಕೊರೊನಾ ಸೋಂಕು ಬಂದಂತಹ ವ್ಯಕ್ತಿಗಳ ಸಂಪರ್ಕದಲ್ಲಿದ್ದವರ ಪತ್ತೆ ಹಚ್ಚಬೇಕು. ಕೊರೊನಾ ನಿಯಂತ್ರಣ ಮಾಡುವಲ್ಲಿ ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳು ಸಹಕಾರ ನೀಡಬೇಕು. ಅಲ್ಲದೇ ಸಾರ್ವಜನಿಕರು ಮಾಸ್ಕ್ ಧರಿಸುವುದು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಬಗ್ಗೆ ಧ್ವನಿವರ್ಧಕಗಳಲ್ಲಿ ಪ್ರಚಾರ ಮಾಡಬೇಕು ಎಂದು ಅವರು ಸೂಚಿಸಿದರು.
ಜಿಲ್ಲೆಯ ಕೆಲವೆಡೆ ರಸ್ತೆಯ ಬದಿಯಲ್ಲಿ ಕಸ ಹಾಕುತ್ತಿರುವುದು ಕಂಡು ಬಂದಿದ್ದು, ರಸ್ತೆ ಬದಿಗೆ ಕಸ ಹಾಕದಂತೆ ಜಾಗೃತಿ ಮೂಡಿಸಬೇಕು. ಅದಾಗ್ಯೂ ಕಸ ಹಾಕಿದರೆ ದಂಡ ವಿಧಿಸಬೇಕು. ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಎಲ್ಲಾ ಇಲಾಖೆಯ ಅಧಿಕಾರಿಗಳ ಶ್ರಮಿಸಬೇಕು ಎಂದು ತಿಳಿಸಿದರು.
ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಎಸ್‍ಸಿಪಿ/ಟಿಎಸ್‍ಪಿ ಮತ್ತಿತರರ ಕಾಮಗಾರಿಗಳನ್ನು ಮಾರ್ಚ್ ಮಾಹೆಯೊಳಗೆ ಪೂರ್ಣಗೊಳಿಸಬೇಕು. ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಶೇ.100ರಷ್ಟು ಪ್ರಗತಿ ಸಾಧಿಸಬೇಕು. ಬೇಸಿಗೆ ಆರಂಭವಾಗುತ್ತಿದ್ದು, ಕುಡಿಯಲು ನೀರಿನ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಗರ ಪ್ರದೇಶಗಳಲ್ಲಿ ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ಬೇರ್ಪಡಿಸಿ ಮನೆ ಬಾಗಿಲಿಗೆ ಬರುವ ಕಸದ ವಾಹನಗಳಿಗೆ ನೀಡುವಂತೆ ಧ್ವನಿವರ್ಧಕಗಳ ಮೂಲಕ ಪ್ರಚಾರ ಮಾಡಬೇಕು ಎಂದರಲ್ಲದೇ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ, ಟ್ರೇಡ್ ಲೈಸೆನ್ಸ್, ನೀರಿನ ತೆರಿಗೆ, ಮಳಿಗೆಗಳ ಬಾಡಿಗೆ ವಸೂಲಾತಿ ಸಂಗ್ರಹವು ನಿಗಧಿತ ಗುರಿ ತಲುಪಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮನೆಗಳಲ್ಲಿ ಸಂಗ್ರಹವಾಗುವ ಹಸಿ ಕಸದಿಂದ ಕಾಂಪೊಸ್ಟ್ ಕಸ ತಯಾರಿಸುವ ಪೈಪ್/ಬ್ಯಾಂಬೂ ಕಾಂಪೊಸ್ಟ್ ತಯಾರಿಕೆ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ 7 ಸಾವಿರಕ್ಕೂ ಹೆಚ್ಚು ಮನೆಗಳು ಅಳವಡಿಸಿಕೊಂಡಿವೆ ಎಂದು ನಗರ ಯೋಜನಾ ನಿರ್ದೇಶಕಿ ಶುಭಾ ಸಭೆಗೆ ತಿಳಿಸಿದರು. ಸಭೆಯಲ್ಲಿ ಪಾಲಿಕೆ ಆಯುಕ್ತೆ ರೇಣುಕಾ ಸೇರಿದಂತೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳು, ಇಂಜಿನಿಯರುಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ