ತುಮಕೂರು :
ಕೋವಿಡ್ ಹಿನ್ನೆಲೆಯಲ್ಲಿ ನಗರದ ಎಂಜಿ ರಸ್ತೆಯಲ್ಲಿಂದು ಜಿಲ್ಲಾಧಿಕಾರಿಗಳಾದ ವೈ.ಎಸ್. ಪಾಟೀಲ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ ಅವರು ಮಾಸ್ಕ್ ಹಾಗೂ ಕೋವಿಡ್ ಮಾರ್ಗಸೂಚಿ ಪಾಲನೆ ಕುರಿತು ಪರಿಶೀಲನೆ ನಡೆಸಿದರು.
ಮಾಸ್ಕ್ ಹಾಕದವರಿಗೆ ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದೇ ಇದ್ದವರಿಗೆ ದಂಡವಿಧಿಸಿದರೆ ಮತ್ತೆ ಕೆಲವರಿಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಾಗೃತಿ ಮೂಡಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು, ಜಿಲ್ಲೆಯಲ್ಲಿ ಸರ್ಕಾರದ ಮಾರ್ಗಸೂಚನೆ ಅನ್ವಯ ಕೋವಿಡ್ ನಿಯಂತ್ರಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ. ತಹಸೀಲ್ದಾರ್ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಿ ಸರ್ಕಾರದ ಹೊಸ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದರು.
ನಗರದಲ್ಲಿ ಕೋವಿಡ್ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಜೋನ್‍ಗಳನ್ನು ಮಾಡಲು ನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಹೆಚ್ಚು ರ್ಯಾಟ್ ಟೆಸ್ಟ್ ಮಾಡುವಂತೆಯೂ ನಿರ್ದೇಶಿಸಿದ್ದೇನೆ. ರ್ಯಮಿಡಿಸ್ವಿಯರ್ ಮತ್ತು ಆಮ್ಲಜನಕ ಕೊರತೆ ಉಂಟಾಗದಂತೆ ನಿರ್ವಹಣಾ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿಯೇ ಹಿರೇಹಳ್ಳಿ ಕೈಗಾರಿಕಾ ಪ್ರದೇಶ ಮತ್ತು ಕುಣಿಗಲ್‍ನಲ್ಲಿ ಆಮ್ಲಜನಕ ಉತ್ಪಾದನೆ ಮಾಡಲಾಗುತ್ತಿದೆ. ಹೀಗಾಗಿ ಜಿಲ್ಲೆಗೆ ಆಮ್ಲಜನದ ಕೊರತೆ ಕಂಡುಬಂದಿಲ್ಲ. ಜಿಲ್ಲೆಯ ಬೇಡಿಕೆಗಿಂತ ಹೆಚ್ಚು ಉತ್ಪಾದನೆ ಮಾಡಿ ಹೊರಗಡೆ ಸರಬರಾಜು ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ ಮಾತನಾಡಿ, ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಗುತ್ತಿದೆ. ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಾರ್ಯಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ತಹಸೀಲ್ದಾರ್ ಮೋಹನ್, ಪಾಲಿಕೆ ಆಯುಕ್ತೆ ರೇಣುಕಾ, ಯೋಜನಾ ನಿರ್ದೇಶಕಿ ಶುಭಾ ಸೇರಿದಂತೆ ಪೊಲೀಸ್ ಹಾಗೂ ಪಾಲಿಕೆ ಸಿಬ್ಬಂದಿಗಳು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ