ತುಮಕೂರು : ನಕಲಿ ವೈದ್ಯರಿಗೆ ಕಡಿವಾಣ ಹಾಕಿ – ಡಿಸಿ

 ತುಮಕೂರು : 

      ವೈದ್ಯಕೀಯ ಅರ್ಹತೆ ಇಲ್ಲದಿದ್ದರೂ ವೈದ್ಯ ವೃತ್ತಿ ನಡೆಸುತ್ತಿರುವ ನಕಲಿ ವೈದ್ಯರು, ಕ್ಲಿನಿಕ್‍ಗಳಿಗೆ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

      ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಸಮಿತಿ, ಜಿಲ್ಲಾ ಆರೋಗ್ಯ ಸಮಿತಿ, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣ, ಜಿಲ್ಲಾ ತಂಬಾಕು ನಿಯಂತ್ರಣ ಸೇರಿದಂತೆ ವಿವಿಧ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿ ತಪ್ಪಿಸಲು ಆರೋಗ್ಯ ಇಲಾಖೆ ಶೀಘ್ರವೇ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ 90 ನಕಲಿ ವೈದ್ಯರಿರುವ ಪ್ರಕರಣ ದಾಖಲಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ನಕಲಿ ವೈದ್ಯರ ಹೆಸರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರ ಹಾಗೂ ನಕಲಿ ಕ್ಲಿನಿಕ್‍ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ನಕಲಿ ವೈದ್ಯರ ಬಗ್ಗೆ ಮಾಹಿತಿ ಸಿಕ್ಕ ತಕ್ಷಣವೇ ಅವರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಬೇಕು. ನಕಲಿ ವೈದ್ಯರ ಹಾವಳಿಗೆ ಕಡಿವಾಣ ಹಾಕಲು ಬೇಕಾದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.

ತಾಯಿ, ಶಿಶು ಮರಣ ತಗ್ಗಿಸಿ :

      ಜಿಲ್ಲೆಯಲ್ಲಿ ಶಿಶು ಮತ್ತು ತಾಯಿ ಮರಣದ ಪ್ರಮಾಣವನ್ನು ದಿನದಿಂದ ದಿನಕ್ಕೆ ಕಡಿಮೆ ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಹೆಚ್ಚು ತಾಯಿ-ಶಿಶು ಮರಣಗಳಾಗುತ್ತಿರುವ ಆಸ್ಪತ್ರೆಗಳನ್ನು ಗುರುತಿಸಿ ಅಂತಹ ಆಸ್ಪತ್ರೆ ವ್ಯಾಪ್ತಿಯ ಪ್ರದೇಶಗಳಲ್ಲಿ ಅಗತ್ಯ ಅರಿವು ಮೂಡಿಸಬೇಕೆಂದರಲ್ಲದೆ ಜಿಲ್ಲೆಯಲ್ಲಿರುವ ಎಲ್ಲಾ ಮಕ್ಕಳಿಗೂ ಪೌಷ್ಟಿಕ ಆಹಾರವನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಸೂಚಿಸಿದರು.

ಸಹಜ ಹೆರಿಗೆ ಪ್ರಮಾಣ ಹೆಚ್ಚಾಗಬೇಕು :

      ಗರ್ಭಿಣಿಯರ ಮತ್ತು ಬಾಣಂತಿಯರ ಆರೋಗ್ಯ ಪರಿಸ್ಥಿತಿ ಕುರಿತು ಸಮಗ್ರ ಮಾಹಿತಿ ಸದಾ ಲಭ್ಯವಿರುವಂತೆ ಜಿಲ್ಲೆಯಲ್ಲಿರುವ ಎಲ್ಲಾ ಗರ್ಭಿಣಿ, ಬಾಣಂತಿಯರ ನೋಂದಣಿಯನ್ನು ಕಡ್ಡಾಯವಾಗಿ ಮಾಡಬೇಕು. ಇದರಿಂದ ಅವರಿಗೆ ತುರ್ತು ಸಂದರ್ಭಗಳಲ್ಲಿ ಸರಿಯಾದ ಆರೋಗ್ಯ ಸೇವೆ ಒದಗಿಸಲು ಸುಲಭವಾಗಲಿದೆ ಎಂದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿಯೇ ಹೆರಿಗೆಗಳು ನಡೆಯುವಂತೆ ಕ್ರಮ ಕೈಗೊಳ್ಳಬೇಕು. ಅಗತ್ಯವಿರುವ ಸಂದರ್ಭದಲ್ಲಿ ಮಾತ್ರ ಸಿಜೇರಿಯನ್ ಹೆರಿಗೆ ಮಾಡಬೇಕು. ಸಹಜ ಹೆರಿಗೆಗಳ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ನಿರ್ದೇಶಿಸಿದರು.

      ಮಳೆಗಾಲದಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಡೆಂಗ್ಯೂ, ಚಿಕೂನ್‍ಗುನ್ಯಾ ಒಳಗೊಂಡಂತೆ ಯಾವುದೇ ಪ್ರಕರಣಗಳು ವರದಿಯಾದಲ್ಲಿ ಅಥವಾ ದೂರುಗಳು ಬಂದಲ್ಲಿ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ನಡೆಸುವುದರೊಂದಿಗೆ ಲಾರ್ವಾ ಸಮೀಕ್ಷೆಯನ್ನು ಸಮರ್ಪಕವಾಗಿ ನಡೆಸಬೇಕು. ನೈರ್ಮಲ್ಯ ಮತ್ತು ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಮೂಲಕ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕೆಂದು ಸಂಬಂಧಿಸಿದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ನೀಡಿ :

      ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ಪ್ರಕರಣ ಕಂಡು ಬರುತ್ತಿದ್ದು, ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು. ನಾಯಿಗಳ ಸಂತತಿ ಹೆಚ್ಚಾದಂತೆ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಬೇಕು. ಪ್ರಸ್ತುತ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆಯನ್ನು ತಕ್ಷಣವೇ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಮರ್ಪಕವಾದ ಚಿಕಿತ್ಸೆ ನೀಡಿ :

      ಜಿಲ್ಲೆಯಲ್ಲಿ ಕ್ಷಯ, ಕುಷ್ಟರೋಗ, ಎಚ್‍ಐವಿ ರೋಗಿಗಳಿಗೆ ಕಾಲ ಕಾಲಕ್ಕೆ ಸರಿಯಾಗಿ ಚಿಕಿತ್ಸೆ ನೀಡಬೇಕು. ಯಾವುದೇ ರೋಗಿಯೂ ಚಿಕಿತ್ಸೆಯಿಂದ ವಂಚಿತರಾಗಬಾರದು. ಚಿಕಿತ್ಸೆ ಜೊತೆಗೆ ಈ ಖಾಯಿಲೆ ಪ್ರಮಾಣವನ್ನೂ ತಗ್ಗಿಸಲು ಅರಿವು ಮೂಡಿಸಬೇಕು ಎಂದು ನಿರ್ದೇಶಿಸಿದರು.

      ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣಿಸದಂತೆ ಹೆಚ್ಚು ಅರಿವು ಮೂಡಿಸಬೇಕು ಎಂದು ತಿಳಿಸಿದರು.

      ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹಿಮಾ, ಆರ್‍ಸಿಹೆಚ್ ಅಧಿಕಾರಿ ಡಾ.ಕೇಶವರಾಜ್, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಚೇತನ್, ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿ ಡಾ.ಮೋಹನ್‍ದಾಸ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಂಬಾಕು ವ್ಯಸನಿಗಳಿಗೆ ಕಡಿವಾಣ ಹಾಕಿ :

       ರಾಷ್ಟ್ರೀಯ ತಂಬಾಕು ನಿಯಂತ್ರಣಕ್ಕಾಗಿ ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಂಡಿರುವುದರೊಂದಿಗೆ ತಂಬಾಕು ವ್ಯಸನಿಗಳ ಪ್ರಮಾಣ ಹೆಚ್ಚಾಗದಂತೆ ಕ್ರಮವಹಿಸಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶನದ ಮೇರೆಗೆ ಹಲವಾರು ನಿಯಂತ್ರಣ ಕ್ರಮಗಳನ್ನು ಕೈಗೊಂಡು ತಂಬಾಕು ವ್ಯಸನಿಗಳಿಗೆ ಆಪ್ತ ಸಮಾಲೋಚನೆ ಹಾಗೂ ಚಿಕಿತ್ಸೆ ನೀಡುವ ಮೂಲಕ ನಿಯಂತ್ರಣ ಸಾಧಿಸಬೇಕು. ಶಾಲೆಗಳಲ್ಲಿ ತಂಬಾಕು ನಿಯಂತ್ರಣ ಕುರಿತು ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚನೆ ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap