ತುಮಕೂರು :
ಜಿಲ್ಲೆಯಲ್ಲಿ ಲಾರ್ವ ಸಮೀಕ್ಷೆ ಮೂಲಕ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ಡೆಂಗ್ಯೂ ವಿರೋಧಿ ಮಾಸಾಚರಣೆ ಹಾಗೂ ಅಡ್ವೋಕೆಸಿ ಸಭೆಯಲ್ಲಿ ಮಾತನಾಡಿದ ಅವರು, ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ 15 ದಿನಕೊಮ್ಮೆ ಲಾರ್ವ ಸಮೀಕ್ಷೆ ನಡೆಸಿ ಸಾಂಕ್ರಾಮಿಕ ರೋಗಗಳ ಕುರಿತು ಅರಿವು ಮಾಡಿಸಬೇಕು ಎಂದರು.
ಚರಂಡಿ, ಖಾಲಿ ನಿವೇಶನ, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪಾದನೆಯಾಗದಂತೆ ಸೂಕ್ತ ಕ್ರಮವಹಿಸಬೇಕು. ವಾರಕ್ಕೊಮ್ಮೆ ಸೊಳ್ಳೆ ನಾಶಕ ದ್ರಾವಣ ಸಿಂಪಡಿಸಬೇಕು. ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ನೀರಿನ ಸಂಗ್ರಹಗಾರಗಳನ್ನು ಸ್ವಚ್ಛಗೊಳಿಸಬೇಕು. ನಗರ ಪ್ರದೇಶಗಳಲ್ಲಿ ವಲಸೆ ಬರುವ ಕಾರ್ಮಿಕರ ಮಾಹಿತಿ ಸಂಗ್ರಹಿಸಿ ಆರೋಗ್ಯ ತಪಾಸಣೆ ನಡೆಸಬೇಕು ಎಂದು ನಿರ್ದೇಶಿಸಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಪುರೋಷತ್ತಮ್ ಮಾತನಾಡಿ, ವೈಯಕ್ತಿಕ ಸ್ವಚ್ಛತೆಗೆ ಗಮನ ಹರಿಸಬೇಕು. ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು.
ಸೊಳ್ಳೆಗಳನ್ನು ನಿಯಂತ್ರಿಸಲು ಸೊಳ್ಳೆ ನಿರೋಧಕ ಹಾಗೂ ಸೊಳ್ಳೆ ಪರದೆ ಬಳಸಿ ಸ್ವಯಂ ರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹಿಮಾ, ಪಾಲಿಕೆ ಆರೋಗ್ಯಾಧಿಕಾರಿ ಡಾ.ರಕ್ಷಿತ್, ಟಿಎಚ್‍ಒ ಶ್ರೀನಿವಾಸ್ ಸೇರಿದಂತೆ ತಾಲ್ಲೂಕು ಆರೋಗ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
