ತುಮಕೂರು : ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ

 ತುಮಕೂರು :

     ತಾಲ್ಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳಲ್ಲಿ ವಿವಿಧ ಯೋಜನೆಗಳಡಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ನೂರರಷ್ಟು ಪ್ರಗತಿ ಸಾಧಿಸುವಂತೆ ತಾಲ್ಲೂಕು ಪಂಚಾಯತ್ ಆಡಳಿತಾಧಿಕಾರಿ ಬಿ.ರಘು ಅವರು ಅಧಿಕಾರಿಗಳಿಗೆ ಸೂಚಿಸಿದರು.

     ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ತಾಲ್ಲೂಕು ಪಂಚಾಯತ್ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಇಲಾಖೆಗಳಿಗೆ ಬಿಡುಗಡೆಯಾಗುವ ಅನುದಾನವನ್ನು ಸಂಪೂರ್ಣವಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳಿಗೆ ತಕ್ಷಣವೇ ಅಂದಾಜು ಕ್ರಿಯಾ ಯೋಜನೆ ತಯಾರಿಸಿ ಟೆಂಡರ್ ಕರೆದು ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ನಿರ್ದೆಶಿಸಿದರು.

      ಅಸಮರ್ಪಕ ಮಾಹಿತಿಯಿಂದ ಅಸಮಧಾನ: ಸಭೆಗೆ ಸಮರ್ಪಕ ಮಾಹಿತಿ ಒದಗಿಸಬೇಕು. ಅಸಮರ್ಪಕ ಮಾಹಿತಿ ಒದಗಿಸುವುದು ಅಧಿಕಾರಿಗಳ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗುತ್ತದೆ ಎಂದು ಅಸಮರ್ಪಕ ಮಾಹಿತಿಯನ್ನು ಒದಗಿಸಿದ ಲೋಕೋಪಯೋಗಿ ಇಲಾಖಾಧಿಕಾರಿ ಮೇಲೆ ಅಸಮಾಧಾನ ವ್ಯಕ್ತಪಡಿಸಿ, ಸಭೆಗೆ ಸಮರ್ಪಕ ಮಾಹಿತಿ ಒದಗಿಸುವಂತೆ ಸೂಚನೆ ನೀಡಿದರು.

    ಯೋಜನೆಗಳ ಸೌಲಭ್ಯ ಅರ್ಹರಿಗೆ ತಲುಪಿಸಿ: 

      ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕೈಗೊಳ್ಳಲಾಗಿರುವ ಅಂಗನವಾಡಿ ಕಟ್ಟಡಗಳನ್ನು ವರ್ಷದ ಅಂತ್ಯದೊಳಗೆ ಸಂಪೂರ್ಣವಾಗಿ ಮುಗಿಸಬೇಕು. ಪರಿಶಿಷ್ಟ ಜಾತಿ, ವರ್ಗ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಲಭ್ಯವಿರುವ ವಿವಿಧ ಯೋಜನಾ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಈ ಇಲಾಖೆಗಳಡಿ ಗಂಗಾ ಕಲ್ಯಾಣ ಯೋಜನೆಯಡಿ ಬಾಕಿ ಉಳಿದಿರುವ ಕೊಳವೆಬಾವಿಗಳನ್ನು ಶೀಘ್ರವೇ ಕೊರೆಸಲು ಕ್ರಮ ವಹಿಸುವಂತೆ ನಿರ್ದೇಶಿಸಿದರು.

      ಹೊಸ ಕೈಗಾರಿಕಾ ಸ್ಥಾಪನೆಗೆ ಮುಂದೆ ಬರುವವರಿಗೆ ‘ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ’ಯಡಿ ತೆಂಗು ಉತ್ಪನ್ನಗಳ ಕೈಗಾರಿಕೆಗಳನ್ನು ಸ್ಥಾಪಿಸಲು ಅರಿವು ಮೂಡಿಸಲು ಕ್ರಮ ವಹಿಸುವಂತೆ ಕೈಗಾರಿಕಾ ವಿಸ್ತರಣಾಧಿಕಾರಿಗೆ ಸೂಚಿಸಿದರು.
ಸಭೆಯಲ್ಲಿ ಗ್ರಾಮೀಣ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕಾರ್ಮಿಕ, ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಸೇರಿದಂತೆ ಇತರೆ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

     ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಜಯಪಾಲ್ ಡಿ. ಮಾತನಾಡಿ, ವಿವಿಧ ಇಲಾಖೆಗಳಡಿ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು. ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap