ತುಮಕೂರು : ಕಡ್ಡಾಯವಾಗಿ ಕೋವಿಡ್ ಕೇಂದ್ರಗಳಲ್ಲೇ ಚಿಕಿತ್ಸೆ!!

 ತುಮಕೂರು :

      ಸಂಭಾವ್ಯ ಕೋವಿಡ್ ಮೂರನೇ ಅಲೆಯಲ್ಲಿ ಕೋವಿಡ್ ಸೋಂಕಿತರನ್ನು ಯಾವುದೇ ಕಾರಣಕ್ಕೂ ಹೋಂ ಕ್ವಾರಂಟೈನ್ ಮಾಡಬಾರದು. ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‍ನಲ್ಲಿಯೇ ಚಿಕಿತ್ಸೆ ನೀಡಬೇಕು ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

      ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಸಂಭಾವ್ಯ ಕೋವಿಡ್ 3ನೇ ಅಲೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಹೋಂ ಕ್ವಾರಂಟೈನ್ ಪದ್ಧತಿಯನ್ನು ನಿಲ್ಲಿಸಿ, ಕೋವಿಡ್ ಕೇರ್ ಸೆಂಟರ್‍ಗಳಲ್ಲಿಯೇ ಚಿಕಿತ್ಸೆ ನೀಡಬೇಕು ಎಂದು ನಿರ್ದೇಶಿಸಿದರು.
ರೈಲ್ವೆ ಹಾಗೂ ಬಸ್ ನಿಲ್ದಾಣಗಳಲ್ಲಿ ಹೊರಗಿನಿಂದ ಬರುವವರನ್ನು ಆ್ಯಕ್ಸಿಮೀಟರ್ ಹಾಗೂ ಥರ್ಮಲ್ ಸ್ಕ್ಯಾನಿಂಗ್ ಪರೀಕ್ಷೆಗೆ ಒಳಪಡಿಸಬೇಕು. ಕೋವಿಡ್ ಲಕ್ಷಣಗಳುಳ್ಳವರನ್ನು ರ್ಯಾಟ್ ಅಥವಾ ಆರ್‍ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಸೂಚಿಸಿದರು.

     ಇಂದಿನಿಂದಲೇ ಕೋವಿಡ್ ಪರೀಕ್ಷಾ ಪ್ರಮಾಣ ಹೆಚ್ಚಿಸಬೇಕು. ಪ್ರತಿನಿತ್ಯ ಗರಿಷ್ಟ ಪ್ರಮಾಣದಲ್ಲಿ ಕೋವಿಡ್ ಪರೀಕ್ಷೆ ಮಾಡಬೇಕು. ಕೋವಿಡ್ ಹೆಚ್ಚಿರುವ ಪ್ರದೇಶಗಳಲ್ಲಿ ಮನೆ ಮನೆಯಲ್ಲಿಯೂ ಕೋವಿಡ್ ಪರೀಕ್ಷೆ ಮಾಡಬೇಕು. ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

     ಜಿಲ್ಲೆಯ ಶಿರಾ ಸೇರಿದಂತೆ ಉಳಿದ ಎಲ್ಲಾ ತಾಲೂಕುಗಳಲ್ಲಿ ಕೋವಿಡ್ ಪರೀಕ್ಷೆಯನ್ನೇ ಮಾಡದ ಪ್ರದೇಶಗಳಲ್ಲಿ ಹಾಗೂ ಮಾರುಕಟ್ಟೆ, ಮಂಡಿ, ಸಂತೆಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು. ಹೊರ ರಾಜ್ಯದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಟ್ಟು ನೆಗೆಟಿವ್ ವರದಿ ಬಂದವರಿಗೆ ಮಾತ್ರ ಮಂಡಿಗಳಿಗೆ ಬರಲು ಅವಕಾಶ ನೀಡಬೇಕು. ನೆಗೆಟಿವ್ ವರದಿಯನ್ನು ಹಾಜರು ಪಡಿಸಬೇಕು. ಕೋವಿಡ್ ನಿರ್ವಹಣೆಯಲ್ಲಿ ಸೂಕ್ತ ರೀತಿಯಲ್ಲಿ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

     ಜಿಲ್ಲೆಯಲ್ಲಿ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಲು ಕ್ರಮವಹಿಸಬೇಕು. ನಿಯಮ ಮೀರಿದವರ ವಿರುದ್ಧ ಕಾನೂನಿನ್ವಯ ದಂಡ ವಿಧಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರವಾಡ್ ಅವರಿಗೆ ಸೂಚಿಸಿದರು.

     ಜಿಲ್ಲೆಯಲ್ಲಿ ಸಂಭಾವ್ಯ ಮೂರನೇ ಅಲೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಕೈಗೊಳ್ಳಬಹುದಾದ ಎಲ್ಲಾ ರೀತಿಯ ಸಿದ್ಧತೆಗಳನ್ನೂ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

      ಸಭೆಯಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ಮತ್ತು ರಾಜೇಶ್ ಗೌಡ, ಎಂಎಲ್‍ಸಿ ಚಿದಾನಂದ ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಉಪವಿಭಾಗಧಿಕಾರಿ ಅಜಯ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್ ಸೇರಿದಂತೆ ಇತರರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link