ತುಮಕೂರು : ವಾರ್ಡಿಗೊಂದು ಮಾತ್ರ ಗಣಪತಿ ಪ್ರತಿಷ್ಠಾಪನೆ!

 ತುಮಕೂರು : 

      ಗಣೇಶ ಚತುರ್ಥಿಯನ್ನು ಸರಳ ರೀತಿಯಲ್ಲಿ, ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಜನಸಂಖ್ಯೆಯೊಂದಿಗೆ ಆಚರಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮನವಿ ಮಾಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು, ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಅಥವಾ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯಬೇಕು. ಗರಿಷ್ಠ 5 ದಿನಗಳಿಗಿಂತ ಹೆಚ್ಚು ದಿನಗಳ ಕಾಲ ಗಣೇಶ ಚತುರ್ಥಿಯನ್ನು ಆಚರಿಸುವಂತಿಲ್ಲ. ನಗರ ಪ್ರದೇಶಗಳಲ್ಲಿ ವಾರ್ಡಿಗೆ ಒಂದರಂತೆ ಮಾತ್ರ ಸಾರ್ವಜನಿಕ ಗಣೇಶೋತ್ಸವ ಆಚರಿಸಬೇಕು.

ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸಾರ್ವಜನಿಕ ಸ್ಥಳಗಳಲ್ಲಿ 20 ಜನರಿಗೆ ಸೀಮಿತವಾದ ಆವರಣವನ್ನು ನಿರ್ಮಿಸಬೇಕು. ಒಮ್ಮೆಲೆ 20 ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡಬೇಕು. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಗಣೇಶ ಪ್ರತಿಷ್ಠಾಪನೆ ಮಾಡಬೇಕು. ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿ ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಮುಖ್ಯವಾಗಿ ಡಿ.ಜೆ. ಮೂಲಕ ಹಾಗೂ ಇನ್ನಿತರೆ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.

      ಗಣೇಶ ಆಚರಣೆಯ ಆಯೋಜಕರು ಕೋವಿಡ್-19ರ ನೆಗೆಟಿವ್ ರಿಪೋರ್ಟ್ ಮತ್ತು ಲಸಿಕೆ ಪಡೆದಿರುವ ಬಗ್ಗೆ, ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ಗಣೇಶ ಆಚರಣೆಯ ಆಯೋಜಿತ ಸ್ಥಳಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಆಯೋಜಕರು ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು.

      ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭದಲ್ಲಿ ಯಾವುದೇ ಮೆರವಣಿಗೆ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಿಸಲಾಗಿದೆ. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ಪೂಜಿಸುವ ವಿಗ್ರಹಗಳನ್ನು ಮನೆಯಲ್ಲಿಯೇ ವಿಸರ್ಜಿಸಬೇಕು. ಸರ್ಕಾರಿ, ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅತೀ ಕನಿಷ್ಠ ಜನಸಂಖ್ಯೆಯೊಂದಿಗೆ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಸ್ಥಳೀಯ ಸಂಸ್ಥೆಗಳ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾಗಿರುವ ಹೊಂಡ ಅಥವಾ ಮೊಬೈಲ್ ಟ್ಯಾಂಕ್ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‍ಗಳಲ್ಲಿ ವಿಸರ್ಜಿಸಬೇಕು.

      ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ, ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ಸ್ಯಾನಿಟೈಜೇಷನ್ ಮಾಡಬೇಕು. ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಆಯೋಜಕರು ಕಲ್ಪಿಸಬೇಕು. ದರ್ಶನಕ್ಕಾಗಿ ಬರುವ ಭಕ್ತಾಧಿಗಳಿಗೆ ಕನಿಷ್ಟ 6 ಅಡಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ, ಭಕ್ತಾದಿಗಳು, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

      ಕೋವಿಡ್ 19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನ, ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು. ಅಲ್ಲದೇ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಗ್ರಾಮ ಪಂಚಾಯತ್, ಇತರ ಸ್ಥಳೀಯ ಸಂಸ್ಥೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ ಮತ್ತಿತರ ಇಲಾಖೆಯಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ಗಣೇಶೋತ್ಸವ ಆಚರಣೆ ಸಂದರ್ಭಕ್ಕನುಗುಣವಾಗಿ ಸರ್ಕಾರ, ಜಿಲ್ಲಾಡಳಿತ, ಪೊಲೀಸ್, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ, ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

      ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ ಸೌಹಾರ್ದತೆ ಮತ್ತು ಸಾಮರಸ್ಯ ಉಂಟಾಗಲು ಪೂರಕವಾಗಿರುವುದರಿಂದ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಆಚರಿಸಬೇಕು.
ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರಡಿ ಶಿಸ್ತಿನ, ಕಾನೂನು ಕ್ರಮ ಮತ್ತು ಅನ್ವಯವಾಗಬಹದಾದ ಇತರ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap