ತುಮಕೂರು:
ಗೃಹ ಸಚಿವ ಡಾ.ಜಿ.ಪರಮೇಶ್ವರ ಮತ್ತು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ‘ಸ್ವಾಭಿಮಾನಿ ಸಮಾವೇಶ’ ಆಯೋಜಿಸುವ ಕುರಿತು ಕಾಂಗ್ರೆಸ್ ಕಾರ್ಯಕರ್ತರ ಅದರಲ್ಲೂ ಅಹಿಂದ ಸದಸ್ಯರ ಸಭೆ ನಡೆಸಿದರು.
ಈ ತಿಂಗಳ ಅಂತ್ಯದಲ್ಲಿ ಅಥವಾ ನವೆಂಬರ್ ಮೊದಲ ವಾರದಲ್ಲಿ ಸಮಾವೇಶ ನಡೆಯಲಿದೆ. ನಗರದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಈ ಬಗ್ಗೆ ಚರ್ಚೆ ನಡೆಸಿದರು. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಎದುರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಮುಡಾ ಪ್ರಕರಣದ ಸಂಬಂಧ ಬಿಜೆಪಿ ಮತ್ತು ಜೆಡಿಎಸ್ ಸಿದ್ದರಾಮಯ್ಯನವರ ಇಮೇಜ್ ಡ್ಯಾಮೇಜ್ ಮಾಡಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನ ಗಳಿಸಿದೆ. ಇದೇ ರೀತಿ ಮುಂದುವರಿದರೆ ಪಕ್ಷ ಮತ್ತಷ್ಟು ಗಟ್ಟಿಯಾಗುತ್ತದೆ ಎಂದು ನವದೆಹಲಿಯಲ್ಲಿ ಸರ್ಕಾರದ ವಿರುದ್ಧ ಪಿತೂರಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಜೆಡಿಎಸ್ ನಾಯಕರಿಗೆ ಸೂಚಿಸಿದ್ದಾರೆ. ಮೈತ್ರಿ ನಾಯಕರು ಸೇರಿಕೊಂಡು ಸಿದ್ದರಾಮಯ್ಯ ವರ್ಚಸ್ಸಿಗೆ ಮಸಿ ಬಳಿಯುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆ ಜೆಡಿಎಸ್‌ಗೆ ಪುನರ್ ಜನ್ಮ ನೀಡಿದೆ.
ಎಚ್.ಡಿ.ಕುಮಾರಸ್ವಾಮಿ ಅದೃಷ್ಟ ಎಂಬಂತೆ ಕೇಂದ್ರದಲ್ಲಿ ಒಳ್ಳೆ ಖಾತೆಯ ಮಂತ್ರಿಯಾದರು. ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ವಿವಿಧ ಯೋಜನೆ ರೂಪಿಸುವುದು ಬಿಟ್ಟು, ರಾಜ್ಯದಲ್ಲಿ ಅವರಿವರ ಮೇಲೆ ಆಪಾದನೆ ಮಾಡಿಕೊಂಡು ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಹಕಾರ ಸಚಿವ ಕೆ.ಎನ್.ರಾಜಣ್ಣ, ಪ್ರತಿಕ್ರಿಯಿಸಿ ‘ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು ಕಾರ್ಯಕರ್ತರು ತಳಮಟ್ಟದಲ್ಲಿ ಕೆಲಸ ಮಾಡಬೇಕು. ಸಮಾವೇಶವು ಮಹಾನಗರ ಪಾಲಿಕೆ, ಜಿ.ಪಂ, ತಾ.ಪಂ ಚುನಾವಣೆಗೆ ನೆರವಾಗುತ್ತದೆ. ಪಕ್ಷ ಸಂಘಟನೆ, ಚುನಾವಣೆ, ಸ್ವಾಭಿಮಾನದ ದೃಷ್ಟಿಯಿಂದ ಅನುಕೂಲವಾಗುತ್ತದೆ. ಮಧುಗಿರಿಯಲ್ಲಿ ಸಮಾವೇಶ ಮಾಡಿದರೆ ಈ ಭಾಗದ ಜನ ಭಾಗವಹಿಸಲು ಸುಲಭವಾಗುತ್ತದೆ’ ಎಂದು ಮನವಿ ಮಾಡಿದರು.