ಬೆಂಗಳೂರು:
ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಇನ್ನು ಮುಂದೆ ಡಾಕ್ಟರ್ ಯುಟಿ ಖಾದರ್ ಆಗಲಿದ್ದಾರೆ. ಸ್ಪೀಕರ್ ಯುಟಿ ಖಾದರ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. ತನ್ನ 60ನೇ ಘಟಿಕೋತ್ಸವದಲ್ಲಿ ಯುಟಿ ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ಬೆಂಗಳೂರು ವಿಶ್ವವಿದ್ಯಾಲಯ ತೀರ್ಮಾನಿಸಿದೆ.
ತನ್ನ 60ನೇ ಘಟಿಕೋತ್ಸವದಲ್ಲಿ ಸ್ಪೀಕರ್ ಯುಟಿ ಖಾದರ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಒಟ್ಟು 3 ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಮಾಜಸೇವಕ ಡಿ. ಮಾದೇಗೌಡ ಹಾಗೂ ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ. ಪ್ರಸನ್ನ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ.
ಅಕ್ಟೋಬರ್ 8ರಂದು ಬೆಂಗಳೂರು ವಿವಿ 60ನೇ ಘಟಿಕೋತ್ಸವ ನಡೆಯಲಿದೆ. ಅಕ್ಟೋಬರ್ 8ರ ಬೆಳಗ್ಗೆ 11:30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ ಘಟಿಕೋತ್ಸವ ಜರುಗಲಿದೆ. ಈ ಸಮಾರಂಭದಲ್ಲಿ ಈ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ. ಬೆಂಗಳೂರು ವಿಶ್ವವಿದ್ಯಾಲಯದ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಈ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.
ಯು.ಟಿ. ಖಾದರ್ ಫರೀದ್ ಹಾಲಿ ಕರ್ನಾಟಕ ವಿಧಾನಸಭೆ ಸ್ಪೀಕರ್. ಮೇ 2023ರಿಂದ ಅವರು ಕರ್ನಾಟಕ ವಿಧಾನಸಭೆಯ 17 ನೇ ಸ್ಪೀಕರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ . ಅವರು ಸದ್ಯ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಧಾನಸಭಾ ಕ್ಷೇತ್ರ ಅಂದರೆ ಈ ಹಿಂದಿನ ಉಳ್ಳಾಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ. ಅವರು ಈ ಹಿಂದೆ ಕರ್ನಾಟಕ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಕ್ಯಾಬಿನೆಟ್ ಸಚಿವರಾಗಿ ಮತ್ತು ನಗರಾಭಿವೃದ್ಧಿ ಮತ್ತು ವಸತಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಯುಟಿ ಖಾದರ್ ಅವರು 2018ರ ರಾಜ್ಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಗೆದ್ದ ಏಕೈಕ ಕಾಂಗ್ರೆಸ್ ಶಾಸಕರಾಗಿದ್ದರು. ಸದ್ಯ ಅವರು 4ನೇ ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.
