ವಂದೇ ಭಾರತ್ ರೈಲು ಸಂಚಾರ : ಬೆಳಗಾವಿವರೆಗೆ ವಿಸ್ತರಣೆಗೆ ಸಚಿವ ಅಶ್ವಿನಿ ವೈಷ್ಣವ್ ಸಮ್ಮತಿ

ನವದೆಹಲಿ

   ಅತಿ ಶೀಘ್ರದಲ್ಲಿಯೇ ಬೆಂಗಳೂರು ಬೆಳಗಾವಿ ಮಧ್ಯೆ ವೆಂದೇ ಭಾರತ್ ರೈಲು ಸಂಚರಿಸಲಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಮತ್ತು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ನವದೆಹಲಿಯಲ್ಲಿ ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.

   ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಸಚಿವ ಪ್ರಲ್ಹಾದ ಜೋಶಿ ಅವರು ಹುಬ್ಬಳ್ಳಿಯ ತಮ್ಮ ಲೋಕಸಭಾ ಕ್ಷೇತ್ರದ ಕಾರ್ಯಾಲಯದಲ್ಲಿ ನೈಋತ್ಯ ವಲಯದ ರೈಲ್ವೆ ಜನರಲ್ ಮ್ಯಾನೇಜರ್, ಡಿಆರ್​ಎಮ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು ಸಂಚಾರ ವಿಸ್ತರಣೆ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದರು.
  ವಂದೇ ಭಾರತ್ ರೈಲು ಬೆಳಗ್ಗೆ ಬೆಳಗಾವಿಯಿಂದ ಹೊರಟು ಬೆಂಗಳೂರು ತಲುಪಿ ಮತ್ತೆ ಬೆಂಗಳೂರಿಂದ ಬೆಳಗಾವಿಗೆ ರಾತ್ರಿ ತಲುಪುವ ಹಾಗೆ ವೇಳಾಪಟ್ಟಿ ನಿಗದಿಗೊಳಿಸಿ ಎಂದು ಸಚಿವ ಪ್ರಲ್ಹಾದ ಜೋಶಿ ನೈಋತ್ಯ ರೈಲ್ವೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ರೈಲ್ವೆ ಅಧಿಕಾರಿಗಳು ತಾಂತ್ರಿಕ ಅಂಶಗಳನ್ನು ವಿಶ್ಲೇಷಿಸಿ, ಸಾಧಕ-ಬಾಧಕಗಳನ್ನು ಅವಲೋಕಿಸಿ ವರದಿ ಸಲ್ಲಿಸಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ವರದಿ ಪರಿಗಣಿಸಿ ಬೆಂಗಳೂರು ಹಾಗೂ ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ.
  ಅತೀ ಶೀಘ್ರದಲ್ಲಿಯೇ ಬೆಳಗಾವಿ ಹಾಗೂ ಬೆಂಗಳೂರಿನ ಮಧ್ಯೆ ವಂದೇ ಭಾರತ್ ರೈಲಿನ ಆರಂಭದ ವೇಳಾಪಟ್ಟಿ ಬಿಡುಗಡೆಯಾಗಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಈ ರೈಲು ಸಂಚಾರದಿಂದ ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಭಾಗದ ಜನತೆಗೆ ಬೆಂಗಳೂರು ಪ್ರಯಾಣಕ್ಕೆ ಅನುಕೂಲವಾಗಲಿದೆ ಎಂದ ಸಚಿವರು, ನಮ್ಮ ಮನವಿಗೆ ಸ್ಪಂದಿಸಿ ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸಲು ಸಮ್ಮತಿ ಸೂಚಿಸಿದ ಕೇಂದ್ರ ರೈಲ್ವೆ ಸಚಿವರಿಗೆ ಧನ್ಯವಾದ ಅರ್ಪಿಸುವೆ ಎಂದಿದ್ದಾರೆ.

Recent Articles

spot_img

Related Stories

Share via
Copy link