ತುಮಕೂರು :
ತುಮಕೂರಿನ ಸಿದ್ಧಾರ್ಥ ತಾಂತ್ರಿಕ ಶಿಕ್ಷಣ ವಿದ್ಯಾರ್ಥಿಗಳಿಂದ ಆನ್‍ಲ್ಲೈನ್ ಪರೀಕ್ಷೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು.
ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ವಾಟಾಳ್ ನಾಗರಾಜ್ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿ, ತಾಂತ್ರಿಕ ಶಿಕ್ಷಣದ ವಿದ್ಯಾರ್ಥಿಗಳು ಆನ್‍ಲೈನ್ ಪರೀಕ್ಷೆಗೆ ಒತ್ತಾಯಿಸುತ್ತಿದ್ದಾರೆ. ಇದು ನ್ಯಾಯಯುತ ಬೇಡಿಕೆಯಾಗಿದ್ದು, ಸರ್ಕಾರ ಎಚ್ಚೆತ್ತು ಕೂಡಲೇ ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಯನ್ನು ಈಡೇರಿಸುವಲ್ಲಿ ಗಮನ ಹರಿಸಬೇಕಾಗಿದೆ. ಇಲ್ಲದಿದ್ದಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ ಹಾಗೂ ಇಂದಿನ ಪ್ರತಿಭಟನೆಯ ಮೂಲಕ ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ಸರ್ಕಾರಕ್ಕೆ ನೇರ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಕೋವಿಡ್‍ನಿಂದ ಜನ ಕಂಗೆಟ್ಟಿದ್ದು ಇಂತಹ ಸಂದರ್ಭದಲ್ಲಿ ಸರ್ಕಾರ ಇದುವರೆಗೂ ಆನ್‍ಲೈನ್ ತರಗತಿಗಳನ್ನು ನಡೆಸಿ, ಈಗ ಏಕಾಏಕಿ ಆಫ್‍ಲೈನ್ ಮೂಲಕ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳು ಸಹ ಸರಿಯಾಗಿ ಮುಗಿದಿಲ್ಲ. ಇಂತಹ ಸಂದರ್ಭದಲ್ಲಿ ಆನ್‍ಲೈನ್ ತರಗತಿಗಳನ್ನು ನಡೆಸಿ ಈಗ ಆಫ್‍ಲೈನ್ ಮೂಲಕ ಪರೀಕ್ಷೆ ಮಾಡಲು ಹೊರಟಿರುವುದು ಅಕ್ಷಮ್ಯ ಅಪರಾಧ. ಇದನ್ನರಿತು ಕೂಡಲೇ ಸರ್ಕಾರ ಗಮನಹರಿಸಿ ಆನ್ಲೈನ್ ಪರೀಕ್ಷೆಗಳನ್ನು ನಡೆಸಬೇಕೆಂದು ಅವರು ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿ ತಿಳಿಸಿದರು.
ಮುಂದಿನ ದಿನಗಳಲ್ಲಿ ಸರ್ಕಾರ ಇತ್ತ ಗಮನ ಹರಿಸದಿದ್ದರೆ ರಾಜ್ಯಾದ್ಯಂತ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ಮಾಡಲಿದ್ದಾರೆ. ಇದಕ್ಕಾಗಿ ತಾವು ಜೈಲಿಗೆ ಹೋಗಲು ಸಿದ್ಧ ಎಂದು ವಾಟಾಳ್ ನಾಗರಾಜ್ ತುಮಕೂರಿನಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ