ಸಂಸತ್‌ನಲ್ಲಿ ಕನ್ನಡದಲ್ಲೇ ವಿಷಯ ಮಂಡಿಸಿದ ಸಂಸದ ಯದುವೀರ್
ನವದೆಹಲಿ:
ಮೈಸೂರು ಸಮೀಪ ಹಳೆ ಕೆಸರೆ ಗ್ರಾಮದ ಅವೈಜ್ಞಾನಿಕ ಘನತ್ಯಾಜ್ಯ ಘಟಕ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್ ಅಧಿವೇಶನದಲ್ಲಿ ಮಾತೃಭಾಷೆ ಕನ್ನಡದಲ್ಲಿ ವಿಷಯ ಮಂಡಿಸುವ ಮೂಲಕ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗಮನ ಸೆಳೆದಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸಿದ್ಧಲಿಂಗಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳೆ ಕೆಸರೆ ಗ್ರಾಮದಲ್ಲಿ ಅವೈಜ್ಞಾನಿಕ ಘನತ್ಯಾಜ್ಯ ಘಟಕ ನಿರ್ಮಾಣದಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಸಂಸತ್ ಅಧಿವೇಶನದಲ್ಲಿ ನಿನ್ನೆ ಪ್ರಸ್ತಾಪ ಮಾಡಿದ ಸಂಸದ ಯದುವೀರ್, ನನ್ನ ಕ್ಷೇತ್ರ ವ್ಯಾಪ್ತಿಯ ಹಳೇ ಕೆಸರೆ ಗ್ರಾಮದಲ್ಲಿ ಘನತ್ಯಾಜ್ಯ ಘಟಕ ನಿರ್ಮಾಣದ ವೇಳೆ ಕಾನೂನು ರೀತಿ ಕ್ರಮಗಳನ್ನು ತೆಗೆದುಕೊಂಡಿಲ್ಲ, ಯಾವುದೇ ನೀತಿ-ನಿಯಮಗಳನ್ನು ಪಾಲಿಸಿಲ್ಲ.
ಘನತ್ಯಾಜ್ಯ ನಿರ್ಮಾಣಕ್ಕೆ ಶಾಸನಬದ್ಧ ಅನುಮತಿಗಳನ್ನು ಪಡೆಯದೇ ನಿರ್ಮಾಣ ಮಾಡಲಾಗಿದೆ. ಅವೈಜ್ಞಾನಿಕವಾಗಿ ನಿರ್ವಹಣಾ ಘಟಕವನ್ನು ಸ್ಥಾಪಿರುವುದರಿಂದ ಕೊಳೆತ ದುರ್ವಾಸನೆ ಹೊರ ಹೊಮ್ಮುತ್ತಿದ್ದು, ಘನ ತ್ಯಾಜ್ಯದಿಂದ ಪರಿಸರದ ಮೇಲೆ ಭಾರಿ ಪರಿಣಾಮ ಬೀರಿದೆ. ಇದರಿಂದ ಸುತ್ತಮುತ್ತಲ ಗ್ರಾಮದ ನಿವಾಸಿಗಳು ನಿರಂತರ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಯಾವುದನ್ನೂ ಪಾಲಿಸಿಲ್ಲ ಎಂದು ಸಮಸ್ಯೆಗಳ ಬಗ್ಗೆ ವಿವರಿಸಿದರು.
ಹಾಗೆಯೇ ಈ ಪ್ರದೇಶದ ಬಳಿಯೇ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ ಜಾಗವಿದ್ದು, ಇಲ್ಲಿಯೂ ಅವೈಜ್ಞಾನಿಕವಾಗಿ ತ್ಯಾಜ್ಯವನ್ನು ಸುಡುವುದು ಹೆಚ್ಚಾಗಿದೆ. ಇದರಿಂದ ಹೊರ ಹೊಮ್ಮುತ್ತಿರುವ ಹೊಗೆ ಹಾಗೂ ವಾಸನೆಯಿಂದ ಜನರಿಗೆ ತೊಂದರೆಯಾಗಿದೆ. ಈ ಬಗ್ಗೆ ಜನರು ಪ್ರತಿಭಟನೆ ನಡೆಸಿ, ಹಿರಿಯ ಅಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರೂ ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಈ ಅವೈಜ್ಞಾನಿಕ ಘಟಕಗಳನ್ನು ಕೂಡಲೇ ತೆರವುಗೊಳಿಸಬೇಕು. ನಮ್ಮ ಕ್ಷೇತ್ರ ವ್ಯಾಪ್ತಿಯ ಸಾವಿರಾರು ಜನರ ಆರೋಗ್ಯ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಯದುವೀರ್ ಸಂಸತ್ ಅಧಿವೇಶನದಲ್ಲಿ ಆಗ್ರಹಿಸಿದ್ದಾರೆ.
