ಬೆಂಗಳೂರು:
79 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ದಾರೆ. ಬಳಿಕ ಸ್ವಾತಂತ್ರೋತ್ಸವ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳು ಜನರ ಜೀವನವನ್ನೇ ಬದಲಿಸಿದೆ ಎಂದು ಹೇಳಿದರು. ಐದು ಗ್ಯಾರಂಟಿ ಗಳಿಂದ 96 ಸಾವಿರ ಕೋಟಿಗೂ ಹೆಚ್ಚು ಹಣವನ್ನೆ ನೀಡಿದ್ದೇವೆ. ಶಕ್ತಿ ಯೋಜನೆಯಲ್ಲಿ 570 ಟ್ರಿಪ್ ಮಹಿಳೆಯರು ಪ್ರಯಾಣಿಸಿದ್ದಾರೆ. 5900 ಹೊಸ ಬಸ್ಸುಗಳನ್ನು ಖರೀದಿ ಮಾಡಿದ್ದೇವೆ. ಮಧ್ಯವರ್ತಿಗಳ ಹಾವಳಿಯಿಲ್ಲದೇ ತಲಾದಾಯ ಹೆಚ್ಚಾಗಿದೆ ಎಂದು ಸಿಎಂ ಭಾಷಣದ ವೇಳೆ ತಿಳಿಸಿದ್ದಾರೆ. ನುಡಿದಂತೆ ನಡೆಯಬೇಕೆಂದ ಧೈರ್ಯ ವಾಕ್ಯದ ಮೂಲಕ ನಮ್ಮ ಸರ್ಕಾರ ತನ್ನದೇ ಆದ ಅಭಿವೃದ್ಧಿ ಮಾದರಿಗಳನ್ನು ನಿರ್ಮಿಸಿದೆ ಎಂದು ಸಿಎಂ ಹೇಳಿದರು.
ಸ್ವಾಂತಂತ್ರಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿದ ಸಿಎಂ, ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭ ಭಾಯಿ ಪಟೇಲ್, ಮೌಲಾನಾ ಅಬುಲ್ ಕಲಾಂ ಆಜಾದ್, ಜವಾಹರ್ ಲಾಲ್ ನೆಹರು, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಮುಂತಾದ ಎಲ್ಲಾ ಅಮರ ವೀರರನ್ನು ಧನ್ಯತಾಭಾವದಿಂದ ಸ್ಮರಿಸೋಣ ಎಂದು ಅವರು ಹೇಳಿದ್ದಾರೆ. ಸ್ವಾತಂತ್ರ್ಯಾನಂತರ ದೇಶದ ರಕ್ಷಣೆಗಾಗಿ ನಡೆದ ಯುದ್ಧಗಳಲ್ಲಿ ಮಡಿದವರಿಗೆ ಸಿಎಂ ಗೌರವ ಸಲ್ಲಿಸಿದ್ದಾರೆ.
ತಲಾದಾಯದಲ್ಲಿ ಕರ್ನಾಟಕ ದೇಶದಲ್ಲೇ ಮೊದಲಿದೆ. ನುಡಿದಂತೆ ನಡೆಯಬೇಕೆಂದ ಧೈರ್ಯ ವಾಕ್ಯದ ಮೂಲಕ ನಮ್ಮ ಸರ್ಕಾರ ತನ್ನದೇ ಆದ ಅಭಿವೃದ್ಧಿ ಮಾದರಿಗಳನ್ನು ನಿರ್ಮಿಸಿದೆ. ಇದಕ್ಕೆ ಕರ್ನಾಟಕ ಅಭಿವೃದ್ಧಿ ಮಾದರಿ ಎಂಬ ಹೆಸರಿನಲ್ಲಿ ಮನ್ನಣೆ ದೊರೆತಿರುವುದು ಹೆಮ್ಮೆಯ ಸಂಗತಿ ಎಂದು ಸಿದ್ದರಾಮ ಹೇಳಿದರು. ವಿಶ್ವಸಂಸ್ಥೆಯ ಮುಖ್ಯಸ್ಥರಾದ ಯಾಂಗ್ ರವರು ಕರ್ನಾಟಕಕ್ಕೆ ಬಂದು, ನಮ್ಮ ಗ್ಯಾರಂಟಿ ಯೋಜನೆಗಳನ್ನ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಕೃಷಿ ವಲಯಕ್ಕೆ 2025-26ರ ಬಜೆಟ್ ನಲ್ಲಿ 51,339 ಕೋಟಿ ಒದಗಿಸಿದ್ದೇವೆ. 2022-23ಕ್ಕೆ ಹೋಲಿಸಿದರೆ ಶೇಕಡಾ 52.34 ರಷ್ಟು ಅನುದಾನವನ್ನು ಕೃಷಿಗೆ ಕೊಟ್ಟಿದ್ದೇವೆ. ನಮ್ಮ ಮೊದಲ ಆದ್ಯತೆ ಕೃಷಿ ಎಂದು ಅವರು ಹೇಳಿದರು.
ದೇಶದ ಪ್ರಮುಖ ಸಂಸ್ಥೆಗಳು ಮಾಡಿರುವ ಸಮೀಕ್ಷೆಗಳ ಪ್ರಕಾರ ಶೇ.10ರಷ್ಟಿರುವ ಶ್ರೀಮಂತರ ಬಳಿ ಶೇ.80ರಷ್ಟು ಸಂಪತ್ತು ಶೇಖರಣೆಯಾಗಿದೆ. ಆದರೆ ಶೇ. 10 ಜನ ಕೇವಲ ಶೇ.3ರಷ್ಟು ಮಾತ್ರ ಜಿಎಸ್ಟಿ ಪಾವತಿಸುತ್ತಿದ್ದರೆಂದು ಅಧ್ಯಯನಗಳು ಹೇಳುತ್ತಿವೆ. ಉಳಿದ ಶೇ.90ರಷ್ಟು ಜನ ಹೊಟ್ಟೆ-ಬಟ್ಟೆಗೆ ದುಡಿಯುವವರಾದ್ದರಿಂದ ಶೇ.97 ರಷ್ಟು ಜಿಎಸ್ಟಿ ಪಾವತಿಸುತ್ತಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಯಾವ ಆರ್ಥಿಕತೆ ಮುಂದುವರೆಯಲು ಸಾಧ್ಯ? ಸಂವಿಧಾನದ ಆಶಯಗಳನ್ನು ಈಡೇರಿಸುವುದು ಹೇಗೆ? ಬೃಹದಾಕಾರವಾಗಿ ಬೆಳೆಯುತ್ತಿರುವ ಅಸಮಾನತೆಯನ್ನು ತಗ್ಗಿಸುವುದು ಹೇಗೆ? ಎಂಬ ಪ್ರಶ್ನೆಗಳು ನಮ್ಮನ್ನು ಬಾಧಿಸಲಾರಂಭಿಸಿದವು. ಈ ಬೃಹತ್ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಉದ್ದೇಶದಿಂದಲೇ ನಾವು ಗ್ಯಾರಂಟಿ ಯೋಜನೆಗಳು ಹಾಗೂ ಇನ್ನಿತರೆ ಜನ ಕಲ್ಯಾಣದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ ಎಂದು ಸಿಎಂ ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳು ರಾಜ್ಯದ ಅಭಿವೃದ್ಧಿಯ ದಿಕ್ಕನ್ನೆ ಬದಲಾಯಿಸುತ್ತಿವೆ. 2023ರ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಆರಂಭಿಸಿದೆವು. ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಯುವನಿಧಿ ಯೋಜನೆಗಳಿಗೆ ಈ ವರೆಗೆ 96,000 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು ವಿನಿಯೋಗಿಸಿದ್ದೇವೆ. ಶಕ್ತಿ ಯೋಜನೆಯಲ್ಲಿ 500 ಕೋಟಿ ಟ್ರಿಪ್ಪುಗಳ ಮೂಲಕ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದನ್ನು ಇತ್ತೀಚೆಗೆ ಆಚರಣೆ ಮಾಡಿದ್ದೇವೆ. ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಜನರಿಗೆ ತಲುಪುವ ಈ ಯೋಜನೆಗಳು ರಾಜ್ಯದ ಜನರ ತಲಾದಾಯವನ್ನು ಹೆಚ್ಚಿಸುತ್ತಿರುವುದಲ್ಲದೆ ಕಾರ್ಮಿಕ ಶಕ್ತಿಯಲ್ಲಿಮಹಿಳೆಯರ ಭಾಗವಹಿಸುವಿಕೆಯನ್ನು ಶೇ.23 ರಷ್ಟು ಹೆಚ್ಚಿಸಿವೆ ಎಂದು ಹಲವು ಅಧ್ಯಯನಗಳು ಹೇಳುತ್ತಿವೆ. ನಾವು ಶಕ್ತಿ ಯೋಜನೆಯನ್ನು ಜಾರಿಗೊಳಿಸುವುದರ ಜೊತೆಗೆ ಸಾರಿಗೆ ಇಲಾಖೆಗೆ ವಿವಿಧ ಮಾದರಿಯ ವಾಹನಗಳು ಸೇರಿದಂತೆ ಒಟ್ಟು 5,049 ಹೊಸ ಬಸ್ಸುಗಳ ಖರೀದಿ ಮತ್ತು 8,473 ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡಿದ್ದೇವೆ ಎಂದರು.
ರೈತರ ಸಬಲೀಕರಣದ ಕುರಿತು ಮಾತನಾಡಿದ ಸಿಎಂ, ಕೃಷಿ ವಲಯಕ್ಕೆ 2025-26ರ ಬಜೆಟ್ ನಲ್ಲಿ 51,339 ಕೋಟಿ ರೂ.ಗಳನ್ನು ಒದಗಿಸಿದ್ದೇವೆ. 2022-23 ಕ್ಕೆ ಹೋಲಿಸಿದರೆ ಶೇ.52.34 ರಷ್ಟು ಹೆಚ್ಚಿನ ಅನುದಾನವನ್ನು ಒದಗಿಸಿ ಕೃಷಿ ವಲಯವನ್ನು ಬಲಪಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಕೊಬ್ಬರಿ, ಮಾವು ಸೇರಿದಂತೆ ಎಲ್ಲಾ ಬೆಳೆಗಳಿಗೆ ಉತ್ತಮ ಬೆಲೆಯನ್ನು ಒದಗಿಸಿದ್ದೇವೆ. ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಯಾವತ್ತೂ ಹಿಂದೆ ಬಿದ್ದಿಲ್ಲ ಎಂದು ಸಿಎಂ ಹೇಳಿದ್ದಾರೆ.
ರಾಜ್ಯದಲ್ಲಿರುವ ಅತಿ ದೊಡ್ಡ ಕೈಗಾರಿಕಾ ಪ್ರದೇಶಗಳನ್ನು ನಿರ್ವಹಿಸಲು ಮತ್ತು ಜಾಗತಿಕ ಉತ್ಪಾದನಾ ತಾಣಗಳಾಗಿ ಅಭಿವೃದ್ಧಿ ಪಡಿಸಲು, ವಿಶ್ವ ದರ್ಜೆಯ ಮೂಲಸೌಕರ್ಯವನ್ನು ಒದಗಿಸುವ ಉದ್ದೇಶದಿಂದ 44,166 ಎಕರೆ ಪ್ರದೇಶವುಳ್ಳ 18 ಕೈಗಾರಿಕಾ ಪ್ರದೇಶಗಳನ್ನು ವಿಶೇಷ ಹೂಡಿಕೆ ಪ್ರದೇಶಗಳೆಂದು ಘೋಷಿಸಲಾಗಿದೆ. ಇವುಗಳ ಜೊತೆಗೆ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೂ ಆದ್ಯತೆ ನೀಡುತ್ತಿದ್ದೇವೆ. 10 ಲಕ್ಷ ಕೋಟಿ ರೂ.ಗಳಿಗಿಂತ ಹೆಚ್ಚಿನ ಹೂಡಿಕೆ ಮಾಡಲು ಕೈಗಾರಿಕೋದ್ಯಮಿಗಳು ಆಸಕ್ತಿ ತೋರಿಸಿದ್ದಾರೆ. ಕೈಗಾರಿಕಾ ಕ್ಷೇತ್ರದಲ್ಲಿ ರಾಜ್ಯವು ದೇಶದ ಮುಂಚೂಣಿ ರಾಜ್ಯಗಳ ಹಾದಿಯಲ್ಲಿದ್ದು ರಾಜ್ಯದ ಜಿ.ಎಸ್.ಡಿ.ಪಿ.ಗೆ ಶೇ.23.6 ರಷ್ಟು ಕೊಡುಗೆಯನ್ನು ನೀಡುತ್ತಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಎರಡನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪ್ರವಾಸಿಗರಿಗೆ ಮೂಲಸೌಕರ್ಯಗಳನ್ನು ಹಾಗೂ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಹೊಸ `ಪ್ರವಾಸೋದ್ಯಮ ನೀತಿ’ಯನ್ನು ಜಾರಿಗೊಳಿಸಿದ್ದೇವೆ ಎಂದರು.








