ಬೆಂಗಳೂರು:
ಕಾವೇರಿ ನದಿ ನೀರು ಹಂಚಿಕೆ ವಿಚಾರ ಸಂಬಂಧ ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಲಾಗಿದೆಯೇ ಹೊರದು, ಮೈತ್ರಿಕೂಡದ ಭಾಗವಾಗಿರುವ ಡಿಎಂಕೆ ಮೆಚ್ಚಿಸಲು ತಮಿಳುನಾಡು ರಾಜ್ಯಕ್ಕೆ ನೀರು ಬಿಡುಗಡೆ ಮಾಡಿಲ್ಲ ಎಂದು ರಾಜ್ಯ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ ನೇತೃತ್ವದ 26 ವಿರೋಧ ಪಕ್ಷಗಳ INDIA ಬಣದ ಭಾಗವಾಗಿರುವ ಆಡಳಿತಾರೂಢ ಡಿಎಂಕೆ ಜತೆಗಿನ ಮೈತ್ರಿಯನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡಿಗೆ ನೀರು ಬಿಡುಗಡೆ ಮಾಡಿಲ್ಲ ಎಂದು ಹೇಳಿದರು.
ನ್ಯಾಯಾಲಯದ ಆದೇಶವನ್ನು ಗೌರವಿಸಿದ್ದೇವೆ ಮತ್ತು ಅದನ್ನು ಪಾಲಿಸಿದ್ದೇವೆ. ಅಲ್ಲದೆ, ನಮ್ಮ ರೈತರ ಹಿತಾಸಕ್ತಿ ಕಾಪಾಡಲು ನಿರ್ಧಾರ ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಈ ಹಿಂದೆ ಜನತಾ ದಳ ಹಾಗೂ ಬಿಜೆಪಿ ಸರಕಾರಗಳು ಎಷ್ಟು ನೀರು ಬಿಡುಗಡೆ ಮಾಡಿದ್ದವು ಎಂಬ ಅಂಕಿಅಂಶಗಳನ್ನು ನೀಡುತ್ತೇವೆ. ಆದರೆ ಈ ವಿಚಾರದಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ, ಕಾವೇರಿ ವಿಚಾರದಲ್ಲಿ ಸರ್ವಪಕ್ಷ ಸಭೆ ಕರೆಯಲು ಚಿಂತನೆ ನಡೆಸಿದ್ದೇವೆ. ಕೇಂದ್ರದಲ್ಲಿ ಬಲಿಷ್ಠ ಸರ್ಕಾರ ಅಧಿಕಾರದೆ ಎಂದು ಹೇಳುತ್ತಿದ್ದವರು ಮಹದಾಯಿ, ಕೃಷ್ಣಾ ಸಮಸ್ಯೆಗಳನ್ನು ಇತ್ಯರ್ಥಪಡಿಸಲಿಲ್ಲ ಎಂದು ವ್ಯಂಗ್ಯವಾಡಿದರು.
ಇದೇ ವೇಳೆ, ತಮಿಳುನಾಡಿಗೆ ಕಾವೇರಿ ನೀರು ಬಿಡಲು ಕಾಂಗ್ರೆಸ್ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದೆ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.
ಈ ಹಿಂದೆ ಯಾವುದೇ ಸರಕಾರಗಳು ಈ ವಿಚಾರದಲ್ಲಿ ಸರ್ವಾಧಿಕಾರಿ ಧೋರಣೆ ತೋರಿಲ್ಲ. ಆದರೆ ಈಗಿನ ಸರಕಾರ ವಿರೋಧ ಪಕ್ಷವನ್ನಾಗಲಿ, ರೈತರನ್ನಾಗಲಿ ವಿಶ್ವಾಸಕ್ಕೆ ತೆಗೆದುಕೊಳ್ಳದೆ ತಾವಾಗಿಯೇ ನಿರ್ಧಾರ ಕೈಗೊಳ್ಳುತ್ತಿದೆ ಎಂದು ಹೇಳಿದರು.
ಇದಲ್ಲದೆ, ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ಡಿಎಂಕೆ, ಕಾಂಗ್ರೆಸ್ ಮಿತ್ರ ಪಕ್ಷವಾಗಿದ್ದು, ಮೇಕೆದಾಟು ರ್ಯಾಲಿ ಆಯೋಜಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರಿಗೆ ಮನವರಿಕೆ ಮಾಡಿ ಮೇಕೆದಾಟು ಜಲಾಶಯ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ