ಬೆಂಗಳೂರು
ಕೊಳ್ಳೆಗಾಲದ ಮಾಜಿ ಶಾಸಕ ನಂಜುಂಡಸ್ವಾಮಿ, ಬಿಜಾಪುರದ ಮಾಜಿ ಶಾಸಕದ ಮನೋಹರ್ ಐನಾಪುರ, ಮೈಸೂರಿನ ಮಾಜಿ ಮೇಯರ್ ಹಾಗೂ ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಕಾಂಗ್ರೆಸ್ ಪಕ್ಷ ಸೇರಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.
ಬಳಿಕ ಡಿ.ಕೆ. ಶಿವಕುಮಾರ್ ಮಾತನಾಡಿ, ಈ ಮೂವರು ನಾಯಕರು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯ ನಾಯಕತ್ವದ ಮೇಲೆ ವಿಶ್ವಾಸ ಇಟ್ಟು ಪಕ್ಷಕ್ಕೆ ಸೇರುತ್ತಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಅನ್ಯ ಪಕ್ಷಗಳ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಅವರಿಗೆ ಅನುಮತಿ ನೀಡಿದ್ದೇವೆ. ಕೆಲವು ಪ್ರಮುಖ ನಾಯಕರನ್ನು ಮಾತ್ರ ಈ ಪಕ್ಷದ ಕಚೇರಿಯಲ್ಲಿ ಸೇರಿಸಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂಬ ಸ್ಪಷ್ಟ ಚಿತ್ರಣ ಸಿಗುತ್ತಿದೆ. ನಮ್ಮ ಈ ಹಿಂದಿನ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ 136 ಸ್ಥಾನ ಗೆಲ್ಲುವ ವರದಿ ಇತ್ತು. ಈಗಿನ ವರದಿಗಳಲ್ಲಿ ಇದು 140 ರ ಗಡಿ ದಾಟಿದೆ. ಸೇವಾ ಮನೋಭಾವ, ಸಿದ್ಧಾಂತ ನಮ್ಮ ಪಕ್ಷದಲ್ಲಿ ಎದ್ದು ಕಾಣುತ್ತಿದೆ ಎಂದರು.
ರಾಜ್ಯ ಚುನಾವಣೆಗೆ ಇನ್ನು 50 ದಿನಗಳು ಮಾತ್ರ ಇವೆ. ಗುಜರಾತ್ ಚುನಾವಣೆ ನಂತರ ಬಿಜೆಪಿಯವರು ರಾಜ್ಯದಲ್ಲಿ ಬಹಳ ತರಾತುರಿಯಲ್ಲಿ ಚುನಾವಣೆ ಮಾಡಲು ಅಧಿಕಾರಿಗಳ ಜತೆ ಸಭೆ ಮಾಡಿ ದಿನಾಂಕ ನಿಗದಿ ಮಾಡಿದ್ದರು. ಆದರೆ ಈಗ ಪ್ರತಿ ದಿನ ತರಾತುರಿಯಲ್ಲಿ ಅಲ್ಪಾವಧಿಯ ಟೆಂಡರ್ ಮೂಲಕ ಅಕ್ರಮ ಹಣ ಕ್ರೋಢೀಕರಣ ಮಾಡುತ್ತಿದ್ದಾರೆ. ಇದಕ್ಕಾಗಿ ಅವರೇ ನಿಗದಿ ಮಾಡಿದ್ದ ದಿನಾಂಕವನ್ನು ಮುಂದೂಡುತ್ತಿದ್ದಾರೆ. ಈ ವಿಚಾರವಾಗಿ ನಾವೆಲ್ಲ ನಾಯಕರು ಚರ್ಚೆ ಮಾಡಿ ಸರ್ಕಾರಕ್ಕೆ ನಮ್ಮ ನಿಲುವು ತಿಳಿಸುತ್ತೇವೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ