ನವದೆಹಲಿ:
ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್ ಎಂಎಸ್ ಪಿ ವಿಚಾರವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲಿದೆ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ಎಂಎಸ್‌ಪಿಗೆ ಕಾನೂನು ಖಾತರಿ ಖಚಿತಪಡಿಸುತ್ತದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಸಂಸತ್ ಭವನದ ಸಂಕೀರ್ಣದಲ್ಲಿ ರೈತ ಮುಖಂಡರ ನಿಯೋಗಕ್ಕೆ ಭರವಸೆ ನೀಡಿದರು.
ಇಂದು ಸಂಸತ್ ಭವನದ ಸಂಕೀರ್ಣದಲ್ಲಿ ರಾಹುಲ್ ಗಾಂಧಿ ರೈತ ಮುಖಂಡರನ್ನು ಭೇಟಿ ಮಾಡಿದರು. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ರೈತ ಮುಖಂಡರ ನಿಯೋಗವು ಕಷಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಹುಲ್ ಗಾಂಧಿ ತಿಳಿಸಿದರು.
ರೈತ ಮುಖಂಡರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನಾವು ಇಂಡಿಯಾ ಬ್ಲಾಕ್ ನಾಯಕರೊಂದಿಗೆ ಚರ್ಚೆ ನಡೆಸುತ್ತೇವೆ ಮತ್ತು ಎಂಎಸ್‌ಪಿಗೆ ಕಾನೂನುಬದ್ಧ ಗ್ಯಾರಂಟಿ ಸಿಗುವಂತೆ ಮಾಡಲು ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ” ಎಂದು ಹೇಳಿದರು.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಪಂಜಾಬ್ ಮಾಜಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಕಾಂಗ್ರೆಸ್ ಮುಖಂಡರಾದ ಸುಖ್ಜಿಂದರ್ ಸಿಂಗ್ ರಾಂಧವಾ, ಗುರ್ಜಿತ್ ಸಿಂಗ್ ಔಜ್ಲಾ, ಧರ್ಮವೀರ್ ಗಾಂಧಿ, ಅಮರ್ ಸಿಂಗ್, ದೀಪೇಂದರ್ ಸಿಂಗ್ ಹೂಡಾ ಮತ್ತು ಜೈ ಪ್ರಕಾಶ್ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.
ಈ ನಿಯೋಗವು ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದ 12 ರೈತ ಮುಖಂಡರನ್ನು ಒಳಗೊಂಡಿತ್ತು. ಆಯಾ ರಾಜ್ಯಗಳಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅವರು ರಾಹುಲ್ ಗಾಂಧಿಗೆ ಮಾಹಿತಿ ನೀಡಿದರು ಎಂದು ಮೂಲಗಳು ತಿಳಿಸಿವೆ.
