ತುಮಕೂರು:
ರಾಜ್ಯದಲ್ಲಿ ಮತ್ತೆ ಹಾಲಿನ ದರ ಏರಿಕೆ ಖಚಿತವಾಗಿದ್ದು, ಪ್ರತೀ ಲೀಟರ್ ಹಾಲಿನ ದರದಲ್ಲಿ 5 ರೂ ಏರಿಕೆ ಮಾಡಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ರಾಜಣ್ಣ, ‘ಇಡೀ ದೇಶದಲ್ಲೇ ಹಾಲಿನ ದರ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ. ಹಾಗಾಗಿ ಈಗಿರುವ ಹಾಲಿನ ದರವನ್ನು ರೈತರ ಹಿತದೃಷ್ಟಿಯಿಂದ 5 ರೂಪಾಯಿ ಏರಿಕೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ.
ರಾಜ್ಯದಲ್ಲಿ 5 ರೂಪಾಯಿ ಹಾಲಿನ ದರ ಹೆಚ್ಚಳ ಮಾಡಿದರೆ ಅದರ ಲಾಭ ನೇರವಾಗಿ ರೈತರಿಗೆ ಸಿಗುತ್ತದೆ. ಯಾವುದೇ ಕಾರಣಕ್ಕೂ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೆ 1 ರೂಪಾಯಿ ಕೂಡಾ ಲಾಭ ಆಗುವುದಿಲ್ಲ. ಏಕೆಂದರೆ ಹಾಲಿನ ದರ 5 ರೂಪಾಯಿ ಹೆಚ್ಚಳ ಮಾಡಿದರೆ ಅಷ್ಟು ಮೊತ್ತವನ್ನು ರೈತರಿಂದ ಸಂಗ್ರಹಿಸುವ ಹಾಲಿಗೆ ನೀಡಲಾಗುವುದು ಎಂದರು.
ಅಂತೆಯೇ ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಸುಮಾರು 10 ರೂಪಾಯಿ ಹಾಲಿನ ದರ ಕಡಿಮೆ ಇದೆ. ಇದರಿಂದ ರೈತರಿಗೆ ನಷ್ಟವಾಗುತ್ತಿದೆ. ಇದನ್ನು ಮನಗಂಡು ಹಾಲಿನ ದರದಲ್ಲಿ ೫ ರೂ. ಏರಿಕೆ ಮಾಡುವಂತೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಈ ಬಗ್ಗೆ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಸದ್ಯ ನಮ್ಮ ರಾಜ್ಯದಲ್ಲಿ 31 ರೂಪಾಯಿಗೆ ರೈತರಿಂದ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದೆ. ಗ್ರಾಹಕರಿಗೆ 42 ರೂಪಾಯಿಗೆ ಲೀಟರ್ ಹಾಲು ಮಾರಾಟ ಮಾಡಲಾಗುತ್ತಿದೆ. ಆದರೆ ಬೇರೆ ರಾಜ್ಯಗಳಲ್ಲಿ ಲೀಟರ್ ಹಾಲಿನ ಬೆಲೆ 56-58 ರೂಪಾಯಿ ಇದೆ. ಈ ಬಗ್ಗೆಯೂ ಗಮನ ಹರಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಲಾಗಿದೆ ಎಂದು ರಾಜಣ್ಣ ಹೇಳಿದರು.
ನಮ್ಮ ರಾಜ್ಯದಲ್ಲಿ ಕಡಿಮೆ ಬೆಲೆಗೆ ರೈತರಿಂದ ಹಾಲು ಸಂಗ್ರಹಣೆ ಮಾಡಲಾಗುತ್ತಿದೆ. ಹಾಗೆಯೇ ಗ್ರಾಹಕರಿಗೆ ಕಡಿಮೆ ಬೆಲೆಗೆ ಹಾಲು ಮಾರಾಟ ಮಾಡುತ್ತಿರುವ ರಾಜ್ಯ ನಮ್ಮದಾಗಿದೆ. ಇಷ್ಟೊಂದು ಕಡಿಮೆ ಬೆಲೆಗೆ ಹಾಲು ಸಂಗ್ರಹಣೆ ಮತ್ತು ಮಾರಾಟ ಮಾಡುತ್ತಿರುವ ರಾಜ್ಯ ಇನ್ನೊಂದಿಲ್ಲ ಎಂಬ ಬಗ್ಗೆಯೂ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ.
ಹಾಲಿನ ದರ ಏರಿಕೆ ಪ್ರಸ್ತಾಪಕ್ಕೆ ಮುಖ್ಯಮಂತ್ರಿಗಳು ಮೊದಲು ನಿರಾಕರಿಸಿದರೂ ನಂತರ ಇದರಿಂದ ರೈತರಿಗೆ ಲಾಭವಾಗುತ್ತದೆ ಎಂಬ ಅಂಶವನ್ನು ಗಮನಕ್ಕೆ ತಂದಾಗ ಪರಿಶೀಲಿಸುವುದಾಗಿ ತಿಳಿಸಿದರು ಎಂದು ರಾಜಣ್ಣ ಹೇಳಿದರು.ಅಂತೆಯೇ ಹಾಲಿನ ದರ ಹೆಚ್ಚಳದಿಂದ ಗ್ರಾಹಕರಿಗೆ ಹೊಡೆತ ಬೀಳುತ್ತದೆ ನಿಜ. ಆದರೆ ಇದರಿಂದ ರೈತರಿಗೆ ಅನುಕೂಲವಾಗುತ್ತದೆ. ಹಾಗಾಗಿ ಬೇರೆ ರಾಜ್ಯಗಳಂತೆ ನಮ್ಮ ರಾಜ್ಯದಲ್ಲೂ ಹಾಲಿನ ದರ ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಇದರಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಲಾಭ ಆಗುವುದಿಲ್ಲ. ಬದಲಾಗಿ ರೈತರ ಆರ್ಥಿಕ ಸಬಲೀಕರಣವಾಗುತ್ತದೆ ಎಂಬುದಷ್ಟೇ ನಮ್ಮ ಉದ್ದೇಶ. ಹಾಲಿನ ದರ ಹೆಚ್ಚಳ ಮಾಡಿದರೆ ಕೇಂದ್ರ ಸರ್ಕಾರಕ್ಕೆ ಲಾಭವಾಗುತ್ತದೆಯೇ ಹೊರತು ರಾಜ್ಯ ಸರ್ಕಾರಕ್ಕಲ್ಲ. ಹಾಲು ಉತ್ಪಾದಕರ ಸಂಘಗಳು ತೆರಿಗೆ ಕಟ್ಟುವುದರಿಂದ ಇದರ ಲಾಭ ಕೇಂದ್ರಕ್ಕಲ್ಲದೆ ಇನ್ಯಾರಿಗೆ ಎಂದು ಅವರು ಪ್ರಶ್ನಿಸಿದರು.
ಅಲ್ಲದೆ ಹಳ್ಳಿಗಳಲ್ಲಿ ಹಣ ವಹಿವಾಟು ಹೆಚ್ಚಳವಾದರೆ ಮಾತ್ರ ದೇಶದ ಜಿಡಿಪಿ ಹೆಚ್ಚಳವಾಗಲು ಸಾಧ್ಯ. ಹಾಗಾಗಿ ರೈತರ ಆರ್ಥಿಕ ಮಟ್ಟ ಸುಧಾರಣೆ, ಹಣ ವಹಿವಾಟು ಹೆಚ್ಚಳಕ್ಕೆ ಒತ್ತು ನೀಡಬೇಕಾಗಿದೆ. ಹಾಲಿನ ದರ ಏರಿಕೆ ಸಂಬಂಧ ಬೆಂಗಳೂರಿನಲ್ಲಿ ಸಭೆ ಕರೆದು ಚರ್ಚಿಸಿ ತೀರ್ಮಾನ ಮಾಡೋಣ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಪ್ರಕಟಿಸಲಾಗುವುದು ಎಂದು ರಾಜಣ್ಣ ತಿಳಿಸಿದರು.ಇನ್ನು ಇಂದಿನ ಪತ್ರಿಕಾಗೋಷ್ಠಿಯಲ್ಲಿ ಕೆಎಂಎಫ್ ಆಡಳಿತ ಮಂಡಳಿ ಸದಸ್ಯ ಕಾಂತರಾಜು, ವೀರೇಶಗೌಡ ಮತ್ತಿತರರು ಉಪಸ್ಥಿತರಿದ್ದರು.