ಬೆಂಗಳೂರು
ಕಾಶ್ಮೀರದಲ್ಲಿ 46 ದಿನದ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದ ಮಾತಿನ ಬಗ್ಗೆ ದೆಹಲಿ ಪೋಲೀಸರು ಸಾಕ್ಷಿ ಕೇಳಿಕೊಂಡು ಅವರ ಮನೆ ಮುಂದೆ ಹೋಗಿದ್ದಾರೆ. ಕರ್ನಾಟಕದಲ್ಲಿ ಭ್ರಷ್ಟಾಚಾರದ ಬಗ್ಗೆ ಸಾಕ್ಷಿ ನೀಡುತ್ತಿದ್ದರೂ ಇಲ್ಲಿ ತನಿಖೆ ಮಾಡುತ್ತಿಲ್ಲ ಎಂದು ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯ ಯುವ ಕ್ರಾತಿ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 100 ರೂ. ಕಾಮಗಾರಿಗೆ 200 ರೂ. ಅಂದಾಜು ನಿಗದಿ ಮಾಡಿ ರಾಜ್ಯದವರು 40% ಕೇಂದ್ರದವರು 40% ಕಮಿಷನ್ ಪಡೆಯುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಈ ಚುನಾವಣೆ ಕರ್ನಾಟಕ ರಾಜ್ಯಕ್ಕೆ ಬಹಳ ಮಹತ್ವದ್ದಾಗಿದೆ. ಇಡೀ ದೇಶಕ್ಕೆ ಈ ಚುನಾವಣೆ ಸಂದೇಶ ನೀಡಲಿದೆ. ಹೀಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು. ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು ಎಂದರು.
ಇದು ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಳವಾಡಿ ಮಲ್ಲಮ್ಮನ ನಾಡು. ಈ ಭಾಗದಲ್ಲಿ ವೀರರು, ಶೂರರು ಇದ್ದಾರೆ. ಈ ಜನರನ್ನು ಇಡಿ, ಸಿಬಿಐ ಮಣಿಸುವುದಿಲ್ಲ. ಇವರ ಬೆದರಿಕೆಗೆ ರಾಹುಲ್ ಗಾಂಧಿ ಎಂದಿಗೂ ಹೆದರುವುದಿಲ್ಲ. ಇವರು ಎಷ್ಟು ದಿನ ತೊಂದರೆ ನೀಡುತ್ತಾರೋ ನೀಡಲಿ. ನಾವು ಎಲ್ಲದಕ್ಕೂ ಸಿದ್ಧವಿದ್ದೇವೆ. ಮೋದಿ ಅವರೇ ನೀವು ನಮ್ಮನ್ನು ಮಣ್ಣಿನಲ್ಲಿ ಹೂತು ಹಾಕಲು ಪ್ರಯತ್ನಿಸಿ. ನಾವು ಬೀಜವಾಗಿದ್ದು, ನಾವು ಪದೇ ಪದೆ ಹುಟ್ಟಿಬರುತ್ತೇವೆ ಎಂದು ಹೇಳಿದರು.
ಎಐಸಿಸಿ ಅದ್ಯಕ್ಷನಾದ ನಂತರ ಬೆಳಗಾವಿ ಭೂಮಿಗೆ ಬಂದಿದ್ದೇನೆ. ಈ ಬೆಳಗಾವಿ ಕಾಂಗ್ರೆಸ್ ಪಕ್ಷಕ್ಕೆ ಪವಿತ್ರ ಭೂಮಿ. ಮಹಾತ್ಮ ಗಾಂಧಿ ಅವರು 100 ವರ್ಷಗಳ ಹಿಂದೆ 39ನೇ ಕಾಂಗ್ರೆಸ್ ಅಧಿವೇಶನ ನಡೆಸಿ ಇದೇ ಭೂಮಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಚುನಾಯಿತರಾಗಿದ್ದರು. ಈಗ ನಾನು ಅದೇ ಸ್ಥಾನಕ್ಕೆ ಆಯ್ಕೆ ಮಾಡಿದ್ದೀರಿ. ಇದಕ್ಕಾಗಿ ನಿಮ್ಮೆಲ್ಲರಿಗೂ ವಂದನೆಗಳು ಎಂದರು.
ಕಾಂಗ್ರೆಸ್ ಇಲ್ಲಿನ 18 ಕ್ಷೇತ್ರಗಳಲ್ಲಿ 15-16ರಲ್ಲಿ ಗೆಲುವು ಸಾಧಿಸುತ್ತಿತ್ತು. ಈ ಬಾರಿ ನಮ್ಮ ನಾಯಕರ ಒಗ್ಗಟ್ಟು ನೋಡಿದರೆ 18ಕ್ಕೆ 18 ಕ್ಷೇತ್ರದಲ್ಲೂ ಗೆಲ್ಲುವ ವಿಶ್ವಾಸವಿದೆ. ರಾಜ್ಯದ ಇತಿಹಾಸದಲ್ಲಿ ಇಷ್ಟು ಭ್ರಷ್ಟಾಚಾರ ಇರಲಿಲ್ಲ. ಗುತ್ತಿಗೆದಾರರ ದೂರು ನೀಡಿದಾಗ ಇದರ ತನಿಖೆಗೆ ಅಮಿತ್ ಶಾ ಅವರು ಯಾಕೆ ಆದೇಶ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಮೋದಿ ಅವರು ಬೆಳಗಾವಿಗೆ ಬಂದು ನನ್ನ ಬಗ್ಗೆ ಮಾತನಾಡಿದ್ದಾರೆ. ನನ್ನ ರಿಮೋಟ್ ಕಟ್ರೋಲ್ ಬೇರೆಯವರ ಬಳಿ ಇದೆ ಎಂದಿದ್ದಾರೆ. ನಿಮ್ಮ ನಡ್ಡಾ ಅವರ ರಿಮೋಟ್ ಕಂಟ್ರೋಲ್ ಯಾರ ಬಳಿ ಇದೆ. ಅದಾನಿ ಅವರ ಬಗ್ಗೆ ರಾಹುಲ್ ಗಾಂಧಿ ಅವರು ಪ್ರಶ್ನೆ ಕೇಳಿದರೆ ಅದನ್ನು ತೆಗೆದು ಹಾಕುತ್ತಾರೆ. ದೇಶದಲ್ಲಿ ಪ್ರಜಾಪ್ರಭುತ್ವವಿಲ್ಲ, ಜಾತಿವಾದ ಇದೆ, ಜಾತಿ ತಾರತಮ್ಯವಿದೆ ಎಂದು ಹೇಳಿದರೆ ಅದು ತಪ್ಪಾ? ಬಿಜೆಪಿಯವರು ಸುಳ್ಳನ್ನು ಹೇಳುತ್ತಿದ್ದಾರೆ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸುವ ಪಣ ತೊಟ್ಟು, ನಾವು ಇದೇ ಭೂಮಿಯಿಂದ ಪ್ರಜಾಧ್ವನಿ ಯಾತ್ರೆ ಆರಂಭಿಸಿದ್ದೆವು. ಇಂದು ಇದೇ ಭೂಮಿಯಲ್ಲಿ ಈ ಯುವಕ್ರಾಂತಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಈ ಪಕ್ಷ ರೈತರು, ಕಾರ್ಮಿಕರು, ಯುವಕರು, ಮಹಿಳೆಯರ ನಂಬಿಕೆಯನ್ನು ಪಡೆದಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡಬೇಕಿದೆ. ಇಲ್ಲಿ ಸೇರಿರುವ ಜನರಿಗೆ ನಾಲ್ಕು ಪಟ್ಟು ಜನ ಹೊರಗೆ ಸೇರಿದ್ದಾರೆ. ಇಷ್ಟು ಪ್ರೀತಿ ತೋರಿರುವ ನಿಮಗೆ ಧನ್ಯವಾದಗಳು ಎಂದರು.
ರಾಜೀವ್ ಗಾಂಧಿ ಅವರು ಯುವಕರ ಮೇಲೆ ವಿಶೇಷ ಪ್ರಿತಿ ಹೊಂದಿದ್ದರು. ಅದಕ್ಕಾಗಿ ಮತದಾನದ ಹಕ್ಕನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸಿದರು. ಭಾರತ ಪುರಾತನ ದೇಶವಾದರೂ ಯುವಕರ ದೇಶ ಎಂದು ರಾಜೀವ್ ಗಾಂಧಿ ಹೇಳಿದ್ದರು.
ಈ ಬಾರಿ ನಾವು ಒಟ್ಟಾಗಿ ಕೆಲಸ ಮಾಡಿ ರಾಜ್ಯದಲ್ಲಿ ಪಕ್ಷಕ್ಕೆ 140 ಕ್ಷೇತ್ರ ತಂದುಕೊಟ್ಟು ರಾಜ್ಯದಲ್ಲಿ ಆಡಳಿತ ನಡೆಸುತ್ತೇವೆ ಎಂದು ನಾನು ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಸಂದರ್ಭದಲ್ಲಿ ಮಾತು ನೀಡುತ್ತಿದ್ದೇನೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಈ ಕೈ ಜೊತೆ ಕೈ ಜೋಡಿಸಿ ಎಂದು ನಾನು ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಇಂದಿನ ಯುವಕ್ರಾಂತಿ ಸಮಾವೇಶಕ್ಕೆ ದೊಡ್ಡ ಪ್ರಮಾಣದಲ್ಲಿ ನೀವು ಭಾಗವಹಿಸಿದ್ದೀರಿ. ನೀವೆಲ್ಲರೂ ಇಂದು ರಾಜ್ಯದಲ್ಲಿ ಯುವ ವಿರೋಧಿ, ಭ್ರಷ್ಟ, ಜನ ವಿರೋಧಿ ಬಿಜೆಪಿ ಸರ್ಕಾರ ಕಿತ್ತೊಗೆದು ಮುಂದಿನ ಐದು ವರ್ಷಗಳ ಭವಿಷ್ಯ ರೂಪಿಸುವ ಸರ್ಕಾರ ತರುವ ಶಪಥವನ್ನು ಇಲ್ಲಿ ಮಾಡಬೇಕು ಎಂದರು.
ಇನ್ನು ಸಂಪರ್ಕ ಹಾಗೂ ಕಂಪ್ಯೂಟರ್ ಕ್ಷೇತ್ರದಲ್ಲಿ ಕ್ರಾಂತಿ ಮಾಡಿ ಯುವಕರಿಗೆ ಉದ್ಯೋಗ ಕೊಟ್ಟರು. ಮೋದಿ ಅವರು ಅಧಿಕಾರಕ್ಕೆ ಬಂದು 9 ವರ್ಷವಾಗಿದೆ. ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿನಿAದ ಅಧಿಕಾರಕ್ಕೆ ಬಂದು ನಾಲ್ಕು ವರ್ಷವಾಗಿದೆ. ನಮ್ಮದು ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿಕೊಂಡ ಇವರು ನಿರುದ್ಯೋಗ ಯುವಕ ಯುವತಿಗೆ ಏನು ಮಾಡಿದ್ದಾರೆ?. ರಾಜ್ಯದಲ್ಲಿ ಚುನಾವಣೆ ಇದೆ ಎಂದು ಮೋದಿ ಅವರು ಮತಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ ನೆರೆ ಬಂದಾಗ ಬರಲಿಲ್ಲ. ರಾಜ್ಯದಲ್ಲಿ ಆಕ್ಸಿಜನ್ ಇಲ್ಲದಾಗ, ಕೋವಿಡ್ ನಿಂದ ಲಕ್ಷಾಂತರ ಜನ ಸತ್ತಾಗ ಬರಲಿಲ್ಲ. ಆದರೆ ಈಗ ಮತ ಕೇಳಲು ಬರುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ದೇಶದ ಮೆರಿಟ್ ವಿದ್ಯಾರ್ಥಿಗಳು ವಿದೇಶಿ ಪಾಲಾಗುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರು. ಆದರೆ ಡಿಸೆಂಬರ್ 2022ಕ್ಕೆ 12,89,000 ಯುವಕರು ಬೇರೆ ದೇಶಕ್ಕೆ ಹೋಗಿದ್ದಾರೆ. ಇದು ಪ್ರತಿಭಾ ಪಲಾಯನ. ಇದಕ್ಕೆ ಮೋದಿ ಅವರು ಉತ್ತರ ನೀಡುತ್ತಾರಾ? ಮೋದಿ ಅವರು ಬಂದಾಗ ನಿರುದ್ಯೋಗ, ಬೆಲೆ ಏರಿಕೆ, ರೈತರು, ಮಹಿಳೆಯರು, ದಲಿತರು, ಹಿಂದುಳಿದ, ಅಲ್ಪಸಂಖ್ಯಾತರ ಸಮಸ್ಯೆ ಬಗ್ಗೆ ಮಾತನಾಡುವುದಿಲ್ಲ. ಕೇವಲ ಭಾವನಾತ್ಮಕ ವಿಚಾರ ಮಾತನಾಡುತ್ತಿದ್ದಾರೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ