ಬೆಂಗಳೂರು:
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆ ನಡೆದಿದೆ. ಈ ಸಭೆಗೆ ಸಂಸದೆ ಸುಮಲತಾ ಅಂಬರೀಷ್ ಗೈರಾಗಿರುವುದು ಭಾರೀ ಕುತೂಹಲ ಮೂಡಿಸಿದೆ.
ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಾಗಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಸಂಸದೆ ಸುಮಲತಾ ಮೌನಕ್ಕೆ ಶರಣಾಗಿದ್ದಾರೆ. ಸುಮಲತಾ ಮೌನ ನಡೆಗೆ ಮೈತ್ರಿ ನಾಯಕರು ಮುನಿಸು ಪ್ರದರ್ಶಿಸುತ್ತಿರುವಂತೆ ಕಂಡು ಬರುತ್ತಿದೆ. ಹೀಗಾಗಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕೆ.ಸಿ.ನಾರಾಯಣಗೌಡ ಅವರೂ ಸಹ ಸುಮಲತಾ ಹೆಸರನ್ನು ಸ್ಮರಿಸುವ ಗೋಜಿಗೂ ಹೋಗಲಿಲ್ಲ.
ಇನ್ನೂ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ಅವರು ಶನಿವಾರ (ಮಾ.30) ಬೆಂಗಳೂರಿನ ತಮ್ಮ ನಿವಾಸದಲ್ಲಿ ಬೆಂಬಲಿಗರು, ಆಪ್ತರ ಸಭೆ ಕರೆದಿದ್ದು ತಮ್ಮ ಮುಂದಿನ ರಾಜಕೀಯ ನಡೆಯನ್ನು ನಿರ್ಧರಿಸಲಿದ್ದಾರೆ. ಮಾರ್ಚ್ 30 ರಂದು ಮಧ್ಯಾಹ್ನ 2.30ಕ್ಕೆ ಸಭೆ ನಿಗದಿಪಡಿಸಿದ್ದು, ಮುಂದಿನ ರಾಜಕೀಯ ನಡೆ ಹೇಗಿರಬೇಕೆಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.
ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗುವ ಮೂಲಕ ಜೆಡಿಎಸ್-ಬಿಜೆಪಿ ಮೈತ್ರಿ ಒಪ್ಪಿ ಮೈತ್ರಿ ಧರ್ಮ ಪಾಲಿಸುವುದೋ ಅಥವಾ ಬಿಜೆಪಿ ಹೈಕಮಾಂಡ್‌ನಿಂದ ಸಿಗಬಹುದಾದ ಸ್ಥಾನ-ಮಾನಗಳನ್ನು ನಿರೀಕ್ಷಿಸುವುದೋ ಅಥವಾ ರಾಜಕೀಯವಾಗಿ ತಟಸ್ಥ ಧೋರಣೆ ಅನುಸರಿಸುವುದೋ ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.