ಬೆಂಗಳೂರು:
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ.
ಈ ಹೇಳಿಕೆ ನೀಡುವ ಮೂಲಕ ಹೆಚ್‌ಡಿ ಕುಮಾರಸ್ವಾಮಿ ಅವರು ಮಹಿಳೆಯರ ಘನತೆಗೆ, ಚಾರಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ. ಈ ಹಿನ್ನಲೆಯಲ್ಲಿ ಕುಮಾರಸ್ವಾಮಿ ಹೇಳಿಕೆಯನ್ನು ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದು, ನೋಟಿಸ್ ಜಾರಿ ಮಾಡಲಿದೆ.
ತಮ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಕುಮಾರಸ್ವಾಮಿ, ನಾನು ಮಹಿಳೆಯರನ್ನು ಅಪಮಾನ ಮಾಡಿಲ್ಲ. ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಮಹಿಳೆಯರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದೆ ಅಷ್ಟೆ. ನಾನು ಸಿಎಂ ಆಗಿದ್ದಾಗ ಮಹಿಳೆಯರಿಗಾಗಿ ಸಾಕಷ್ಟು ಯೋಜನೆ ತಂದಿದ್ದೇನೆ. ಮಹಿಳೆಯರ ಕೂಗಿಗೆ ಸ್ಪಂದಿಸಿ ರಾಜ್ಯದಲ್ಲಿ ಸರಾಯಿ ನಿಷೇಧಿಸಿದ್ದೇನೆ. ಮಹಿಳೆಯರ ಬಗ್ಗೆ ನಾನು ಕೇವಲವಾಗಿ ಮಾತನಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ತುಮಕೂರಿನ ತುರುವೇಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಭರದಲ್ಲಿ ಹಳ್ಳಿಯ ಹೆಣ್ಣು ಮಕ್ಕಳ ಬಗ್ಗೆ ಲಘುವಾಗಿ ಮಾತನಾಡಿದ್ದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ