ಟಿಕೆಟ್‌ ಘೋಷಣೆ ನಂತರ ಯದುವೀರ್‌ ಒಡೆಯರ್‌ ಹೇಳಿದ್ದೇನು ಏನು….?

ಮೈಸೂರು:

   ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಟಿಕೆಟ್ ಸಿಕ್ಕ ಬಳಿಕ ಯದುವೀರ್ ಒಡೆಯರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಟಿಕೆಟ್‌ ಘೋಷಣೆ ಬಳಿಕ ಫೇಸ್‌ಬುಕ್‌ನ ತಮ್ಮ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.

   ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರ. ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ ಎಂದು ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ.

    9 ಒಂಬತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗೂ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದೇನೆ. ಅನೇಕ ಪ್ರಜಾಬಾಂಧವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದೆ. ನನ್ನನ್ನು ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ. ಈಗ ಆ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ ಎಂದು ಕೋರಿದ್ದಾರೆ.

  ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದದಿಂದ ಮೈಸೂರು ಮತ್ತು ಕೊಡಗಿನ ಸರ್ವಾಂಗೀಣ ಏಳಿಗೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು ನಾನು ಆಶಿಸುತ್ತಿದ್ದೇನೆ. ಜನರ ಶುಭ ಹಾರೈಕೆ ಮತ್ತು ಬೆಂಬಲವನ್ನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

   ಚುನಾವಣೆಯಲ್ಲಿ ಪಕ್ಷವನ್ನು ಪ್ರತಿನಿಧಿಸಲು ತಮ್ಮ ಮೇಲೆ ನಂಬಿಕೆ ಇಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೆಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.

   ಎರಡು ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ್ದಕ್ಕಾಗಿ ಪ್ರತಾಪ ಸಿಂಹ ಅವರನ್ನು ಅಭಿನಂದಿಸುತ್ತೇನೆ. ಈ ಕ್ಷೇತ್ರದ ಅಭಿವೃದ್ಧಿಗೆ ಅವರ ಬದ್ಧತೆ ನಮ್ಮೆಲ್ಲರ ಭವಿಷ್ಯದ ಆಕಾಂಕ್ಷೆಗಳಿಗೆ ಭದ್ರ ಅಡಿಪಾಯ ಹಾಕಿಕೊಟ್ಟಿದೆ, ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯ ಆಶಿರ್ವಾದಾನುಗ್ರಹಗಳು ನಮ್ಮೆಲ್ಲರ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೆನೆ ಎಂದು ಬರೆದುಕೊಂಡಿದ್ದಾರೆ.

Recent Articles

spot_img

Related Stories

Share via
Copy link
Powered by Social Snap