ಬೆಂಗಳೂರು
ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳಿಗೆ ಡಿಸೆಂಬರ್ 2ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಪ್ರಕರಣದಲ್ಲಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀಡಿದ್ದ ಸಮನ್ಸ್ ರದ್ದು ಮಾಡಲು ಇತ್ತೀಚೆಗೆ ಹೈಕೋರ್ಟ್ ನಿರಾಕರಿಸಿತ್ತು. ಅಲ್ಲದೆ, ಅರ್ಜಿದಾರರು ಖುದ್ದು ಹಾಜರಿಗೆ ಸಕಾರಣಗಳನ್ನು ನೀಡಿ, ವಿನಾಯ್ತಿ ಕೋರಿ ಅರ್ಜಿ ಸಲ್ಲಿಸಿದಲ್ಲಿ ಅದನ್ನು ಕಾನೂನು ರೀತಿ ಪರಿಗಣಿಸಬೇಕು ಎಂದು ತಿಳಿಸಿತ್ತು.
ಇದರ ಬೆನ್ನಲ್ಲೇ, ಯಡಿಯೂರಪ್ಪ ಅವರನ್ನು ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ವಿಶೇಷ ಅಭಿಯೋಜಕರು ವಿಶೇಷ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿರುವ ನ್ಯಾಯಪೀಠ, ಪ್ರಕರಣದ ಮೊದಲ ಆರೋಪಿ ಯಡಿಯೂರಪ್ಪ, ಇತರೆ ಆರೋಪಿಗಳಾದ ಅರುಣ್, ಮರಿಸ್ವಾಮಿ ಹಾಗೂ ರುದ್ರೇಶ್ ಅವರಿಗೂ ಸಮನ್ಸ್ ಜಾರಿ ಮಾಡಿದೆ.
ಪ್ರಕರಣ ಸಂಬಂಧ ಹೈಕೋರ್ಟ್ ಈ ಹಿಂದೆ ನಡೆಸಿದ್ದ ವಿಚಾರಣೆ ವೇಳೆ ಆರೋಪಿತ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆದ್ದರಿಂದ ನ್ಯಾಯಾಲಯಕ್ಕೆ ಖುದ್ದು ಹಾಜರಾದರೂ, ಅವರನ್ನು ಬಂಧನ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಸಂಬಂಧ ಸಂತ್ರಸ್ತೆಯ ತಾಯಿ 2024ರ ಮಾ. 14ರಂದು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ನಂತರ ಸಿಐಡಿಗೆ ತನಿಖೆ ವರ್ಗಾವಣೆಯಾಗಿತ್ತು. ಸಿಐಡಿ ಪೊಲೀಸರು ಯಡಿಯೂರಪ್ಪ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ಆನಂತರ ವಿಚಾರಣಾಧೀನ ನ್ಯಾಯಾಲಯವು ಕಾಗ್ನಿಜೆನ್ಸ್ ತೆಗೆದುಕೊಂಡಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಹೊಸದಾಗಿ ಕಾಗ್ನಿಜೆನ್ಸ್ ಪಡೆದುಕೊಳ್ಳಲು ನಿರ್ದೇಶನ ನೀಡಿತ್ತು. ಇದೀಗ ಎರಡನೇ ಬಾರಿಗೆ ಯಡಿಯೂರಪ್ಪ ಮತ್ತಿತರರು ಮತ್ತೆ ಸಂಜ್ಞೆ ಪರಿಗಣಿಸಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ್ದರು. ಆ ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಸಮನ್ಸ್ ಜಾರಿ ಮಾಡಲಾಗಿದೆ.








