ಶ್ರೀನಗರ:
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಿನ್ನೆ ನಡೆದ ಭಾರೀ ಉಗ್ರರ ದಾಳಿ ಬೆನ್ನಲ್ಲೇ ಉಧಾಮ್‌ಪುರದಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದಾರೆ . ದುಡು-ಬಸಂತ್‌ಗಢ ಅರಣ್ಯ ಪ್ರದೇಶದಲ್ಲಿ ಉಗ್ರರು ಅವಿತಿರು ಬಗ್ಗೆ ಖಚಿತ ಮಾಹಿತಿ ಮೇರೆಗೆ ಸೇನೆ ಮತ್ತು ಪೊಲೀಸರು ಜಂಟೀ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದರು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಕೂಡ ಗುಂಡಿನ ದಾಳಿ ನಡೆಸಿದ್ದಾರೆ. ಭಾರೀ ಗುಂಡಿನ ಕಾಳಗದಲ್ಲಿ ಗುಂಡೇಟು ತಗುಲಿ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಸೇನೆ, ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಇಂದು ಉಧಮ್‌ಪುರದ ಬಸಂತ್‌ಗಢದಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಈ ವೇಳೆ ಭೀಕರ ಗುಂಡಿನ ಚಕಮಕಿ ನಡೆಯಿತು. ನಮ್ಮ ವೀರ ಯೋಧರೊಬ್ಬರು ಗುಂಡಿನ ಚಕಮಕಿಯಲ್ಲಿ ಗಂಭೀರ ಗಾಯಗೊಂಡರು. ಅವರು ಚಿಕಿತ್ಸೆ ಫಲಕಾರಿಯಾಗದೇ ದುರಾದೃಷ್ಟವಶಾತ್ ಹುತಾತ್ಮರಾಗಿದ್ದಾರೆ ಎಂದು ಹೇಳಿದ್ದಾರೆ.
